ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್) ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಪ್ರಕಟಿಸಿದ್ದಾರೆ. ಇನ್ನೂ ಪ್ರಕರಣ ಸಂಬಂಧ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 55 ಮಂದಿ ಬಂಧನವಾಗಿದೆ. ಪರಿಸ್ಥಿತಿ ಶಾಂತಿಯುತವಾಗಿದ್ದರೂ, ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 14 ರವರೆಗೆ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.
ಪ್ರಕರಣ ಸಂಬಂಧ ಬಂಧಿಸಲಾಗಿದ್ದ 52 ಜನರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡವೂ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಮೆರವಣಿಗೆ ವೇಳೆ ಉಂಟಾದ ಘರ್ಷಣೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗುರುವಾರ ಸಂಜೆ ಅಮಾನತು ಮಾಡಲಾಗಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ನಾಗಮಂಗಲದ ನೆಮ್ಮದಿ ಕೆಡಿಸಿದ 150 ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 52 ಜನರನ್ನ ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ತಲೆಮರೆಸಿಕೊಂಡ 97 ಗಲಭೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
Advertisement