ಬೆಂಗಳೂರು: ಸೆಕ್ಸ್ ವಿಡಿಯೋ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ.
ಸಂತ್ರಸ್ತೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಮಾಜಿ ಸಂಸದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಪೀಠ, ಸಂತ್ರಸ್ತೆಯರ ಖಾಸಗಿತನವನ್ನು ರಕ್ಷಿಸುವ ಉದ್ದೇಶದಿಂದ ಗೌಪ್ಯವಾಗಿ ವಿಚಾರಣೆ ನಡೆಸಬೇಕು ಎಂಬ ಪ್ರಾಸಿಕ್ಯೂಷನ್ ಮನವಿಯನ್ನು ತಿರಸ್ಕರಿಸಿದೆ.
ವಿಚಾರಣೆಯನ್ನು ತೆರೆದ ನ್ಯಾಯಾಲಯದಲ್ಲಿ ನಡೆಸಲಾಗುವುದು. ಆದರೆ ಸಂತ್ರಸ್ತರ ಹೆಸರುಗಳು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸ್ಪಷ್ಟ ಸಂಗತಿಗಳನ್ನು ಓದದಂತೆ ವಕೀಲರಿಗೆ ನಿರ್ದೇಶಿಸಿದ ಹೈಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.
ಹೊಳೆನರಸೀಪುರ ಟೌನ್ ಪೊಲೀಸರು ದಾಖಲಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ 2,144 ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ.
ಪ್ರಜ್ವಲ್ ರೇವಣ್ಣ ಅವರು ತಮ್ಮ ಮನೆಯ 47 ವರ್ಷದ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ ಮತ್ತು ನಂತರ ಸಂತ್ರಸ್ತೆಯ ಮಗಳಿಗೆ ಪೋರ್ನ್ ವೀಡಿಯೊಗಳನ್ನು ಕಳುಹಿಸಿದ ಮತ್ತು ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದಾರೆ.
Advertisement