
ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೀಸಲಾತಿ ಕುರಿತು ನೀಡಿದ್ದ ಹೇಳಿಕೆ ಖಂಡಿಸಿ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಇದೇ ವೇಳೆ ರಾಹುಲ್ ಗಾಂಧಿ ಅವರ ಪ್ರತಿಕೃತಿ ದಹಿಸಲು ಮುಂದಾದ ವೇಳೆ ಪ್ರತಿಭಟನಕಾರರನ್ನು ಪೊಲೀಸರು ತಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು ತಾವು ಮೀಸಲಾತಿ ವಿರೋಧಿ ಎಂದಿದ್ದರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿ ಸಹ ಆ ಪರಂಪರೆಯನ್ನು ಮುಂದುವರೆಸಿದ್ದಾರೆಂದು ಟೀಕಿಸಿದರು.
ಇದೇ ವೇಳೆ ರಾಹುಲ್ ಹೇಳಿಕೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಒತ್ತಾಯಿಸಿದರು.
Advertisement