
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪವಾಗಿದ್ದು, ಸಿಎಂ ಇದ್ದ ಕಾರ್ಯಕ್ರಮದ ವೇದಿಕೆ ಮೇಲೆ ಯುವಕನೋರ್ವ ಜಿಗಿದ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.
ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಯುವಕನೊಬ್ಬ ಏಕಾಏಕಿ ವೇದಿಕೆ ಮೇಲೆ ಜಿಗಿದು ಸಿದ್ದರಾಮಯ್ಯ ಅವರ ಕಡೆ ಧಾವಿಸಿ ಶಾಲು ಹೊದಿಸಲು ಪ್ರಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಆ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಕನ್ನಡ ಬಾವುಟದ ಶಾಲು ಧರಿಸಿದ್ದ ಯುವಕ, ಸಿದ್ದರಾಮಯ್ಯ ಅವರಿಗೆ ಶಾಲು ಹಾಕಲು ವೇದಿಕೆಯತ್ತ ತೆರಳಿದ್ದ, ಈ ವೇಳೆ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಶಾಲನ್ನು ಸಿದ್ದರಾಮಯ್ಯ ಅವರ ಕಡೆ ಎಸೆದ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಯುವಕ ಕನಕಪುರ ಮೂಲದವನು ಎನ್ನಲಾಗಿದ್ದು, ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Advertisement