ಬೆಂಗಳೂರು: ರೌಡಿ ಶೀಟರ್ ವ್ಯಕ್ತಿಯೋರ್ವ ನಡು ರಸ್ತೆಯಲ್ಲಿ ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಇದು ತಿಂಗಳ ಹಿಂದೆ ನಡೆದ ಘಟನೆ ಎನ್ನಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿ ತಡವಾಗಿ ಸೋಮವಾರ ಬೆಳಕಿಗೆ ಬಂದಿದೆ.
ಆರೋಪಿಯನ್ನು ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಪವನ್ (28) ಎಂದು ಗುರುತಿಸಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಪವನ್ ಹಾಗೂ ಆತನ ಸಹಚರರ ನಡುವಿನ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ ಆತನ ಆಪ್ತನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾನೆ.
ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಸಂತ್ರಸ್ತ ಯಾವುದೇ ದೂರು ದಾಖಲಿಸಿಲ್ಲ. ಆದಾಗ್ಯೂ, ಪೊಲೀಸರು ಈ ಪ್ರಕರಣವನ್ನು ತನಿಖೆಗೆ ತೆಗೆದುಕೊಡಿದ್ದು, ಪವನ್ ಹಾಗೂ ಸಂತ್ರಸ್ತನಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಈ ಮಧ್ಯೆ ಇದೇ ರೌಡಿ ಶೀಟರ್ ಭಾನುವಾರ ರಾತ್ರಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀನಿವಾಸಪುರದಲ್ಲಿ ವಿಶ್ವಾಸ್ ಎಂಬ ವ್ಯಕ್ತಿ ಮೇಲೂ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಪವನ್ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕಾಗಿ ಆತನ ಸ್ನೇಹಿತ ವಿಶ್ವಾಸ ಮೇಲೆ ಹಲ್ಲೆ ಮಾಡಿರುವುದಾಗಿ ಪಶ್ಚಿಮ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ. ಈ ಸಂಬಂಧ ವಿಶ್ವಾಸ್ ಸೋಮವಾರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.
Advertisement