Tirupati ಲಡ್ಡು ವಿವಾದ, ನಂದಿನಿ ತುಪ್ಪ ಬಳಸಿ, ದೇವಾಲಯಗಳಿಗೆ ಸರ್ಕಾರ ಆದೇಶ; ಗೋರಿಪಾಳ್ಯ ಪಾಕ್‌ನಲ್ಲಿದೆಯಾ?- ಹೈಕೋರ್ಟ್ ನ್ಯಾಯಮೂರ್ತಿ; ದಸರಾ ಉದ್ಘಾಟಿಸಲಿರುವ ಹಂ.ಪ ನಾಗರಾಜಯ್ಯ! ಇವು ಇಂದಿನ ಪ್ರಮುಖ ಸುದ್ದಿಗಳು 20-09-24

Tirupati ಲಡ್ಡು ವಿವಾದ, ನಂದಿನಿ ತುಪ್ಪ ಬಳಸಿ, ದೇವಾಲಯಗಳಿಗೆ ಸರ್ಕಾರ ಆದೇಶ; ಗೋರಿಪಾಳ್ಯ ಪಾಕ್‌ನಲ್ಲಿದೆಯಾ?- ಹೈಕೋರ್ಟ್ ನ್ಯಾಯಮೂರ್ತಿ; ದಸರಾ ಉದ್ಘಾಟಿಸಲಿರುವ ಹಂ.ಪ ನಾಗರಾಜಯ್ಯ! ಇವು ಇಂದಿನ ಪ್ರಮುಖ ಸುದ್ದಿಗಳು 20-09-24

1. ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಕೆ ಆರೋಪ: ಕರ್ನಾಟಕ ದೇವಾಲಯಗಳಿಗೆ ತಟ್ಟಿದ ಬಿಸಿ

ತಿರುಪತಿಯ ತಿರುಮಲ ದೇಗುಲದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರ ಹೇಳಿಕೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಇದರ ಬಿಸಿ ಇದೀಗ ಕರ್ನಾಟಕದ ಪ್ರಮುಖ ದೇವಾಲಯಗಳಿಗೆ ತಟ್ಟಿದೆ. ಕರ್ನಾಟಕದ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದವನ್ನು ಪರೀಕ್ಷೆಗೊಳಪಡಿಸಿಯೇ ಹಂಚಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕರ್ನಾಟಕದಲ್ಲಿ 34,000 ದೇವಾಲಯಗಳು ದತ್ತಿ ಇಲಾಖೆಯ ಸುಪರ್ದಿಯಲ್ಲಿದೆ. ಈ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ನಂತರ ಭಕ್ತರಿಗೆ ಪ್ರಸಾದವನ್ನು ನೀಡಲಾಗುತ್ತದೆ. ಅಲ್ಲದೆ, ಇನ್ನುಂದೆ ಕೆಎಂಎಫ್ ನೀಡಿದ ನಂದಿನಿ ತುಪ್ಪವನ್ನು ಮಾತ್ರ ಪ್ರಸಾದಕ್ಕೆ ಬಳಸಬೇಕು ಎಂದು ಸುತ್ತೋಲೆ ಹೊರಡಿಸಿದೆ ಎಂದರು.

2. ಮೈಸೂರು ದಸರಾ ಉದ್ಘಾಟಿಸಲಿರುವ ಹಂ.ಪ ನಾಗರಾಜಯ್ಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ. ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ನಾನು ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆ ಮಾಡಿದ್ದೇನೆ. ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನ ನೀಡಲಾಗುವುದು ಎಂದು ತಿಳಿಸಿದರು. ಅಕ್ಟೋಬರ್ 3ರಂದು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ.

3. ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯಾ? ಹೈಕೋರ್ಟ್ ನ್ಯಾಯಮೂರ್ತಿ ಹೇಳಿಕೆ ವಿವಾದ

ಮುಸ್ಲಿಮರು ಹೆಚ್ಚಾಗಿ ವಾಸಿಸುವ ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನಿಸುವ ಮೂಲಕ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ವಿವಾದವನ್ನು ಹುಟ್ಟುಹಾಕಿದ್ದಾರೆ. ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದರು. ನ್ಯಾಯಾಧೀಶರ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೆ ಸುಪ್ರೀಂ ಕೋರ್ಟ್ ಸಹ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಅಷ್ಟೇ ಅಲ್ಲದೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಂದ ಈ ಸಂಬಂಧ ವರದಿ ಕೇಳಿದೆ.

4. ಅತ್ಯಾಚಾರ ಪ್ರಕರಣ ಆರೋಪ: ಶಾಸಕ ಮುನಿರತ್ನ ಬಂಧನ

ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದು ಅಲ್ಲದೆ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ನಿನ್ನೆ ದೂರು ನೀಡಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

5. ದಾವಣಗೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ

ದಾವಣಗೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಚಾಮರಾಜಪೇಟೆ ವೃತ್ತದ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ತೂರಾಟ ಆರಂಭವಾಯಿತು. ಮೆರವಣಿಗೆ ವೇಳೆ ಭಕ್ತರು ಘೋಷಣೆಗಳನ್ನು ಕೂಗುತ್ತಿದ್ದಂತೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟದಲ್ಲಿ ಇಬ್ಬರು ಪೇದೆಗಳು ಗಾಯಗೊಂಡಿದ್ದರು. ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜಿಸಲಾಯಿತು. ಘಟನೆ ಸಂಬಂಧ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

6. ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಡಿನೋಟಿಫಿಕೇಶನ್ ಅಸ್ತ್ರ

ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಪ್ರಕರಣವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಡಿನೋಟಿಫಿಕೇಶನ್ ಅಸ್ತ್ರವನ್ನು ಪ್ರಯೋಗಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಚಿವ ಸಂತೋಷ್ ಲಾಡ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್'ಡಿ.ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ಗೆ ಸಂಬಂಧಿಸಿದಂತೆ ಕೆಲ ದಾಖಲೆಗಳನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಕೆಲವು ಪ್ರಕರಣಗಳಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ತಪ್ಪು ಮಾಡಿದವರಿಗೆ ರಾಜ್ಯಪಾಲರು ರಕ್ಷಣೆ ನೀಡುತ್ತಿದ್ದಾರೆ. ಇವರು ಮಾಡಿದ ಅಕ್ರಮಗಳು ಒಂದೆರಡಲ್ಲ. ಅದರ ದಾಖಲೆಗಳನ್ನು ಇದೀಗ ಜನತೆಯ ಮುಂದಿಟ್ಟಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com