ರಾಜ್ಯದಲ್ಲಿ ವಿದ್ಯುತ್ ಕಡಿತವಿಲ್ಲ; 24 ರಂದು ಯಲಹಂಕ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಕೆ.ಜೆ ಜಾರ್ಜ್‌

ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಸಾಕಷ್ಟು ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಕೆ ಜೆ ಜಾರ್ಜ್
ಕೆ ಜೆ ಜಾರ್ಜ್
Updated on

ಬೆಂಗಳೂರು: ವಿದ್ಯುತ್ ಕೊರತೆಯಿಲ್ಲದ ಕಾರಣ ರಾಜ್ಯದಲ್ಲಿ ಯಾವುದೇ ವಿದ್ಯುತ್ ಕಡಿತವಾಗತ್ತಿಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಶನಿವಾರ ಹೇಳಿದ್ದಾರೆ.

ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಸಾಕಷ್ಟು ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳು 28 ದಿನಗಳ ಕಲ್ಲಿದ್ದಲು ದಾಸ್ತಾನು ಹೊಂದಿವೆ. ಆಮದು ಮಾಡಿಕೊಳ್ಳುವ ಕಲ್ಲಿದ್ದಲಿಗೆ ಶೇ.30 ರಷ್ಟು ಸ್ಥಳೀಯ ಕಲ್ಲಿದ್ದಲು ಮಿಶ್ರಣ ಮಾಡಲಾಗುತ್ತಿದೆ ಎಂದರು. ರಾಜ್ಯವು ಪವನ ಮತ್ತು ಸೌರ ಮೂಲಗಳಿಂದ ಸಾಕಷ್ಟು ಪ್ರಮಾಣದ ವಿದ್ಯುತ್ ಉತ್ಪಾದಿಸುತ್ತಿದೆ ಎಂದು ಅವರು ಹೇಳಿದರು.

ಯಲಹಂಕದಲ್ಲಿ ಸ್ಥಾಪಿಸಿರುವ 370 ಮೆಗಾವಾಟ್ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು (ವೈಸಿಸಿಪಿಪಿ) ಸೆ.24ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ’ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ. ಕೆಪಿಸಿಎಲ್ ಅಂಗಸಂಸ್ಥೆ ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಮೂಲಕ ಯಲಹಂಕದ ಕೆಪಿಸಿಎಲ್ ಯೋಜನಾ ಪ್ರದೇಶದಲ್ಲಿ ಈ ವಿದ್ಯುತ್ ಸ್ಥಾವರ ಸ್ಥಾಪಿಸಲಾಗಿದೆ. ಒಟ್ಟು 370 ಮೆ.ವಾ. ಸಾಮರ್ಥ್ಯದ ಈ ಸ್ಥಾವರವನ್ನು ಸುಮಾರು 2,500 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಅನಿಲ್ (ಗ್ಯಾಸ್) ಮತ್ತು ಹಬೆ(ಸ್ಟೀಮ್) ಮೂಲಕ ವಿದ್ಯುತ್ ಉತ್ಪಾದಿಸಲಾಗುತ್ತಿದೆ’ ಎಂದು ವಿವರಿಸಿದರು. ಗ್ಯಾಸ್ ಟರ್ಬೈನ್ ಮೂಲಕ 237 ಮೆ.ವಾ. ಮತ್ತು ಸ್ಟೀಮ್ ಟರ್ಬೈನ್ ಮೂಲಕ 133 ಮೆ.ವಾ. ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕೆ ಜೆ ಜಾರ್ಜ್
ಪರಿಸರಕ್ಕೆ ಧಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಕೆ ಜೆ ಜಾರ್ಜ್ ಭರವಸೆ

ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ, 2014ರ ಜು.28ರಂದು ಈ ವಿದ್ಯುತ್ ಸ್ಥಾವರ ಅನುಷ್ಠಾನಕ್ಕೆ ಅನುಮೋದನೆ ಸಿಕ್ಕಿತ್ತು. 2016ರಲ್ಲಿ ಸ್ಥಾವರಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಕಳೆದ ಆಗಸ್ಟ್‌ 8ರಿಂದ ಪೂರ್ಣ ಪ್ರಮಾಣದಲ್ಲಿ (20 ಗಂಟೆಗಳು) ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಯಶಸ್ವಿಯಾಗಿದೆ. ಘಟಕದ ಕಾರ್ಯಾಚರಣೆಗೆ ಇದ್ದ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಈಗ ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದರು. ಬಿಡದಿಯಲ್ಲಿ ಸ್ಥಾಪಿಸಲಾಗಿರುವ ತ್ಯಾಜ್ಯದಿಂದ ವಿದ್ಯುತ್ ತಯಾರಿಸುವ (ಡಬ್ಲ್ಯುಟಿಇ– ವೇಸ್ಟ್ ಟು ಎನರ್ಜಿ) ಸ್ಥಾವರ ಉದ್ಘಾಟನೆಗೆ ಸಿದ್ಧವಾಗಿದೆ. ಪ್ರಾಯೋಗಿಕವಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಶೀಘ್ರದಲ್ಲೇ ಉದ್ಘಾಟಿಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಮಾತನಾಡಿ, ಬಿಡದಿ ಡಬ್ಲ್ಯುಟಿಇ ಘಟಕದಲ್ಲಿ 6 ಸಾವಿರ ಟನ್‌ನಷ್ಟು ಒಣ ತ್ಯಾಜ್ಯ ಬಳಕೆ ಮಾಡಿ ಪ್ರಾಯೋಗಿಕವಾಗಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಸ್ಥಾವರವನ್ನು ಲೋಕಾರ್ಪಣೆ ಮಾಡಲಾಗುತ್ತದೆ ಎಂದರು.

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಮಾತನಾಡಿ, ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆಯನ್ನು ಚಾನಲ್ ಮಾಡಲು, ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಪ್ರಾಯೋಗಿಕ ಅಧ್ಯಯನಗಳನ್ನು ಸಹ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com