ಮುಡಾ ಹಗರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ; ಗುಡ್ಡ ಕುಸಿತ: 72 ದಿನಗಳ ಬಳಿಕ ಅರ್ಜುನ್ ಲಾರಿ ಪತ್ತೆ!, ಉರ್ದು ಭಾಷೆ ಕಡ್ಡಾಯಗೊಳಿಸಿದ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ; ಇವು ಇಂದಿನ ಪ್ರಮುಖ ಸುದ್ದಿಗಳು 25-09-2024

file pic
ಸುದ್ದಿ ಮುಖ್ಯಾಂಶಗಳು (ಸಂಗ್ರಹ ಚಿತ್ರ)online desk

1. ಮುಡಾ ಹಗರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ 

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಪ್ರಕಟಿಸಿದೆ. ಮುಡಾ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​ ಅನ್ನು ಹೈಕೋರ್ಟ್​ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ್ದು, ಹಗರಣ ಸಂಬಂಧ ಆರು ವಾರಗಳ ಒಳಗಾಗಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ವಿಶೇಷ ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ. ಪೂರ್ಣ ಆದೇಶದ ಪ್ರತಿ ಸಿಕ್ಕಿದ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ. ನಾವು ಯಾವುದಕ್ಕೂ ಹೆದರಲ್ಲ, ತನಿಖೆಗೆ ನಾವು ತಯಾರಿದ್ದೇವೆ. ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2. ಶಿರೂರು ರಾಷ್ಟ್ರೀಯ ಹೆದ್ದಾರಿ ಗುಡ್ಡ ಕುಸಿತ: ಕೇರಳ ಮೂಲದ ಚಾಲಕ ಅರ್ಜುನ್ ಮೃತದೇಹ ಪತ್ತೆ!

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಮೃತದೇಹ 72 ದಿನಗಳ ಬಳಿಕ ಪತ್ತೆಯಾಗಿದೆ. ಜುಲೈ 16ರಂದು ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ 11 ಮಂದಿ ಕೊಚ್ಚಿ ಹೋಗಿದ್ದರು. 8 ಮಂದಿ ಮೃತದೇಹ ಪತ್ತೆಯಾಗಿತ್ತು. ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಈಗ ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ ಪತ್ತೆಯಾಗಿದೆ. ಇನ್ನು ಗುಡ್ಡ ಕುಸಿತದ ರಭಸಕ್ಕೆ ನದಿಗೆ ಬಿದ್ದು ಲಾರಿ ನಜ್ಜುಗುಜ್ಜಾಗಿದೆ. ಇದೇ ವೇಳೆ ಮತ್ತೊಂದು ಮೃತದೇಹ ಪತ್ತೆಯಾಗಿದ್ದು ಅದು ಯಾರು ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ.

3. ವೈಯಾಲಿಕಾವಲ್ ನಲ್ಲಿ ಮಹಿಳೆ ಹತ್ಯೆ: ಒಡಿಶಾದಲ್ಲಿ ತಲೆ ಮರೆಸಿಕೊಂಡ ಆರೋಪಿ-ಗೃಹ ಸಚಿವ ಪರಮೇಶ್ವರ

ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ 50 ತುಂಡುಗಳಾಗಿ ಕತ್ತರಿಸಿ ಫ್ರೀಡ್ಜ್ ನಲ್ಲಿಟ್ಟ ಆರೋಪಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಹತ್ಯೆಯ ನಂತರ ಆರೋಪಿ ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದು, ಪ್ರಕರಣವನ್ನು ಭೇದಿಸಲು ರಚಿಸಲಾದ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. . ಆರೋಪಿ ತಾನು ಇರುವ ಸ್ಥಳಗಳನ್ನು ಬದಲಾಯಿಸುತ್ತಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಎರಡು-ಮೂರು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ಲಭ್ಯವಿರುವ ಸಾಕ್ಷ್ಯ ಮತ್ತು ಮಾಹಿತಿಯ ಆಧಾರದ ಮೇಲೆ ಒಡಿಶಾದಲ್ಲಿರುವ ಆರೋಪಿ ಈ ಕೃತ್ಯ ಎಸಗಿರುವ ಅನುಮಾನವಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

4. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಹೇಳಿಕೆ ವಿಚಾರ: ಪ್ರಕರಣ ಇತ್ಯರ್ಥಗೊಳಿಸಿದ ಸುಪ್ರೀಂ ಕೋರ್ಟ್ 

ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ಹೇಳಿಕೆ ವಿಚಾರವಾಗಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದೆ. ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ, ಈ ರೀತಿ ಹೇಳುವುದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ” ಎಂದು ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಹೇಳಿದೆ. ನ್ಯಾಯಮೂರ್ತಿ ಶ್ರೀಶಾನ೦ದ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ವು ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ಇನ್ನು ನ್ಯಾಯಾಲಯ ಕಲಾಪದ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಕೂಡದು. ಈಗಾಗಲೇ ಬಳಸಿರುವ ವಿಡಿಯೋಗಳನ್ನು ಕೂಡಲೇ ತೆಗೆದು ಹಾಕುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಪ್ರಕಟಿಸಿದೆ.

5. ಚಿಕ್ಕಮಗಳೂರು: ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ; ಉರ್ದುಭಾಷೆ  ಕಡ್ಡಾಯಗೊಳಿಸಿದ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸರ್ಕಾರದ ನಡೆಗೆ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಇತ್ತೀಚಿನ ಅಧಿಸೂಚನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು. ಆ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com