ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ.
ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬಿದ್ದಿದೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ತೋರಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.
ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಆರ್ಪಿಸಿ ಕಾಯ್ದೆ ಉಲ್ಲೇಖಿಸಿ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ನಿಸ್ಸಂದೇಹವಾಗಿ ತನಿಖೆಯ ಅಗತ್ಯವಿದೆ ಎಂದ ಕೋರ್ಟ್
ತೀರ್ಪಿನ ವೇಳೆ ತಮ್ಮ ಪತ್ನಿಗೆ ಹಂಚಿಕೆಯಾಗಿರುವ ನಿವೇಶನಗಳ ವಿಷಯದಲ್ಲಿ ಸಿದ್ದರಾಮಯ್ಯನವರ 'ತೆರೆ ಹಿಂದಿನ ಪಾತ್ರ ಇರಬಹುದಾದ ಅನುಮಾನದ ಕಾರಣ' ನಿಸ್ಸಂದೇಹವಾಗಿ ತನಿಖೆಯ ಅಗತ್ಯವಿದೆ ಎಂದು ಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ಅಲ್ಲದೆ ಮೈಸೂರಿನ ಮಾರ್ಕೆಟ್ ಪ್ರದೇಶದಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಮೇಲ್ದರ್ಜೆಯ ಪ್ರದೇಶದಲ್ಲಿ ಪರಿಹಾರದ ನಿವೇಶನಗಳನ್ನು ಹಂಚಿಕೆ ಮಾಡಿದ್ದರಿಂದ ಮುಖ್ಯಮಂತ್ರಿಗಳ ಕುಟುಂಬವು ಮೇಲ್ನೋಟಕ್ಕೆ ಅನಗತ್ಯ ಲಾಭವನ್ನು ಪಡೆದುಕೊಂಡಿದೆ ಎಂದು ಹೈಕೋರ್ಟ್ ಕೂಡ ಗಮನಿಸಿದೆ.
ಜನಪ್ರತಿನಿಧಿ ತನ್ನ ಸ್ವಂತ ಕುಟುಂಬಕ್ಕೆ ಲಾಭದಾಯಕವಾಗಲು ಸಾಕಷ್ಟು ಸಂದರ್ಭವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅನಗತ್ಯ ಪ್ರಭಾವಕ್ಕಾಗಿ, ಯಾವುದೇ ಶಿಫಾರಸುಗಳು ಅಥವಾ ಯಾವುದೇ ಆದೇಶವನ್ನು ಜನಪ್ರತಿನಿಧಿಗಳು ಹೊರಡಿಸುವ ಅಗತ್ಯವಿಲ್ಲ ಎಂದೂ ಹೈಕೋರ್ಟ್ ಹೇಳಿದೆ.
ಹೈಕೋರ್ಟ್ ಕೂಡ ಸಿದ್ದರಾಮಯ್ಯನವರ ಪ್ರಾಥಮಿಕ ಪಾತ್ರವನ್ನು ಎತ್ತಿ ತೋರಿಸಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತನಿಖೆಗೆ ನಾಚಿಕೆಪಡಬಾರದು ಎಂದು ಹೇಳಿದೆ.
Advertisement