
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಕಾನೂನು ಸ್ಪಷ್ಟತೆ ಪಡೆಯಲು ಮುಂದಾಗಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ವೇದಿಕೆ ಸಜ್ಜಾಗಿದೆ.
ಮುಡಾದಿಂದ ಮುಖ್ಯಮಂತ್ರಿ ಅವರ ಪತ್ನಿ ಬಿ.ಎಂ. ಪಾವರ್ತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದ ಮರು ದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಗೆ ಆದೇಶಿಸಿದ್ದರು.
ಆದರೆ ಇನ್ನೂ ಪ್ರಕರಣವನ್ನು ದಾಖಲಿಸಿಲ್ಲ. ವಿಶೇಷ ನ್ಯಾಯಾಲಯ ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಅಡಿಯಲ್ಲಿ ಆದೇಶ ನೀಡಿರುವುದರಿಂದ ಕೆಲವು ಕಾನೂನು ಸ್ಪಷ್ಟೀಕರಣ ಪಡೆಯಲಾಗುತ್ತಿದೆ. ಈ ತನಿಖೆಗೆ ಬಹುಶಃ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಅಡಿಯಲ್ಲಿ ಆದೇಶ ನೀಡಬೇಕಾಗಿತ್ತು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.
BNSS ಅಡಿಯಲ್ಲಿ ಕಾನೂನುಬದ್ಧವಾಗಿ ಪ್ರಕರಣ ದಾಖಲಿಸಬೇಕಾಗಿದೆ ಆದರೆ ನ್ಯಾಯಾಲಯ CrPC ಅಡಿಯಲ್ಲಿ ಆದೇಶ ನೀಡಿದೆ. ಆದ್ದರಿಂದ ಸ್ಪಷ್ಟೀಕರಣ ಕೇಳಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮುಡಾ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾದ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಆದರೆ ಇಲ್ಲಿಯವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ಗುರುವಾರ ಕಳವಳ ವ್ಯಕ್ತಪಡಿಸಿದರು. ಲೋಕಾಯುಕ್ತ ಪೊಲೀಸರು ನ್ಯಾಯಾಲಯದ ಆದೇಶವನ್ನು ಪಾಲಿಸುತ್ತಿಲ್ಲ ಮತ್ತು ಮೈಸೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ ಜೆ ಉದೇಶ್ ನಾಪತ್ತೆಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪತ್ನಿ ಅವರಿಂದ ವಶಕ್ಕೆ ಪಡೆಯಲಾದ ನಿವೇಶನಕ್ಕೆ ಬದಲಿಗೆ ಮೈಸೂರಿನ ಮೇಲ್ಮಟ್ಟದ ಪ್ರದೇಶದಲ್ಲಿ ಹೆಚ್ಚಿನ ಮೌಲ್ಯ ಹೊಂದಿರುವ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
Advertisement