ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಡಿಜಿಟಲೀಕರಣವು ರಾಜ್ಯಾದ್ಯಂತ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಇಲಾಖೆ ಸಚಿವ ಶಿವಾನಂದ ಪಾಟೀಲ್ ಅವರು ಶುಕ್ರವಾರ ಹೇಳಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್‌ಕೆಸಿಸಿಐ) 107ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಸಚಿವರು, ಮಾರುಕಟ್ಟೆ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವುದು ಪ್ರಮುಖ ಬೇಡಿಕೆಯಾಗಿದ್ದು, ಈಗಾಗಲೇ ಈ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಈ ವ್ಯವಸ್ಥೆಯಲ್ಲಿ ಹಲವಾರು ಪಾಲುದಾರರು ಇದ್ದಾರೆ. ಯಾರಿಗೂ ಸಮಸ್ಯೆ ಆಗದಿರುವ ರೀತಿಯಲ್ಲಿ ಹೊಸ ವ್ಯವಸ್ಥೆ ಅಳವಡಿಸುವ ಕಾರ್ಯ ಮಾಡಬೇಕಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಇದಲ್ಲದೆ, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ವಿವರಿಸಿರುವಂತೆ ರಾಜ್ಯದಲ್ಲಿ ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ಅಗತ್ಯ ಕಾನೂನು ರೂಪಿಸಿದೆ ಎಂದು ತಿಳಿಸಿದರು.
ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಮಾತನಾಡಿ, ಎಪಿಎಂಸಿಗಳ ಡಿಜಿಟಲೀಕರಣದಿಂದ ಕೈಗಾರಿಕಾ ಸಮುದಾಯಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದರು
Advertisement