ದಲಿತರ ಬಗ್ಗೆ ಅಷ್ಟೊಂದು ಕಾಳಜಿಯಿದ್ದರೆ ರಾಷ್ಟ್ರಮಟ್ಟದಲ್ಲಿ SCSP/TSP ಕಾಯ್ದೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ.
ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ
ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ
Updated on

ಬೆಂಗಳೂರು: ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತನ್ನಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸವಾಲು ಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದು ಸವಾಲು ಹಾಕಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ. ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ. ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ.

ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ
ಗೋದ್ರಾ ಗಲಭೆ ಆಗಿದ್ದಾಗ ಮೋದಿ ರಾಜೀನಾಮೆ ನೀಡಿದ್ದರಾ?: ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.8,616 ಕೋಟಿಯಾಗಿದ್ದರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.15,894 ಕೋಟಿ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ, ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ.

ಕರ್ನಾಟಕದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ. ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಸವಾಲು ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com