ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿರ್ಮಲಾ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದರೆ, ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು A3, ನಳಿನ್ ಕುಮಾರ್ ಕಟೀಲ್ A4, ಬಿ.ವೈ ವಿಜಯೇಂದ್ರ A5, ರಾಜ್ಯ ಬಿಜೆಪಿ ಪದಾಧಿಕಾರಿಗಳು A6 ಆರೋಪಿಗಳಾಗಿದ್ದಾರೆ. ಇನ್ನು ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿತ್ತು. ಆದರೆ ಅದಕ್ಕೆ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಕೇಂದ್ರ ಸಚಿವೆ ನಿರ್ಮಾ ಸೀತಾರಾಮನ್ ರಾಜಿನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.
ಅತ್ಯಾಚಾರ, ಜಾತಿ ನಿಂದನೆ ಆರೋಪಕ್ಕೆ ಗುರಿಯಾಗಿರುವ ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌ಐಟಿ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದೆ. ಎಫ್ಎಸ್ಎಲ್ ತಂಡದೊಂದಿಗೆ ತೆರಳಿ ಎಸ್ಐಟಿ ಅಧಿಕಾರಿಗಳು ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಆರೋಪದಲ್ಲಿ ಮುನಿರತ್ನರನ್ನು ಬಂಧಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿದ್ದರಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ಮರುದಿನವೇ ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮುನಿರತ್ನರನ್ನು ಬಂಧಿಸಿದ್ದರು.
ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್ ಮಾಡಿದ್ದಾರೆ. ಇದು ಗಮನಕ್ಕೆ ಬಂದ ಕೂಡಲೇ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಬಾಂಬ್ ಸಿಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಂಬ್ ಬೆದರಿಕೆ ಇ-ಮೇಲ್ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಹೆಚ್ ಟಿ ತಿಳಿಸಿದ್ದಾರೆ.
ರಾಜ್ಯದಲ್ಲಿ 4071 ಕೋಟಿ ರೂಪಾಯಿ ಹೂಡಿಕೆಯ 88 ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ಅನುಮೋದನೆ ನೀಡಿದೆ. ಆನೇಕಲ್‌ನ ವೀರಸಂದ್ರ ಗ್ರಾಮದಲ್ಲಿ 485 ಕೋಟಿ ರೂ. ಹೂಡಿಕೆಯೊಂದಿಗೆ 1,000 ಮಂದಿಗೆ ಐಟಿ ಮತ್ತು ಐಟಿಇಎಸ್ ಕ್ಷೇತ್ರದಲ್ಲಿ ಉದ್ಯೋಗ ನೀಡುವ ಅರಾಟ್ ಒನ್ ವರ್ಲ್ಡ್ ಪ್ರೈ.ಲಿ ಕಂಪನಿಗೆ ಅನುಮತಿ ನೀಡಲಾಗಿದೆ. ಕಲಬುರಗಿ ಜಿಲ್ಲೆಯ ನಂದೂರು ಕಾಸರಟಗಿ ಕೈಗಾರಿಕಾ ಪ್ರದೇಶದಲ್ಲಿ 285 ಕೋಟಿ ವೆಚ್ಚದಲ್ಲಿ ಡೇರಿ ಕ್ಲಾಸಿಕ್ ಐಸ್ ಕ್ರೀಂ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು ಇದರಿಂದ 900 ಜನರಿಗೆ ಉದ್ಯೋಗ ಸಿಗಲಿದೆ ಎಂದು ಎಂಬಿ ಪಾಟೀಲ್ ತಿಳಿಸಿದರು.
ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಸಚಿವ ಶಿವಾನಂದ ಪಾಟೀಲ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 223 ಅಡಿಯಲ್ಲಿ ಜಾರಿಗೊಳಿಸಿದ್ದ ನೋಟಿಸ್‌ನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೆ, ಹೊಸದಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ತಮ್ಮ ವಿರುದ್ಧ ಜಾರಿಯಾಗಿದ್ದ ನೋಟಿಸ್ ರದ್ದುಪಡಿಸುವಂತೆ ಕೋರಿ ಬಸನಗೌಡ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.
Advertisement