
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸಾಹಿತಿ ಹಂ.ಪ. ನಾಗರಾಜಯ್ಯ ಈ ಬಾರಿಯ ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ, ವಸ್ತುಪ್ರದರ್ಶನ, ಕ್ರೀಡಾ ಉತ್ಸವ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ನಿರ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಎಚ್ಚರಿಕೆ ವಹಿಸಿದ್ದರೆ ಅನಾಹುತ ನಡೆಯುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Advertisement