ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ, ಫೆ.7 ರಂದು ದೆಹಲಿಯಲ್ಲಿ ಧರಣಿ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ. 7 ರಂದು ಕಾಂಗ್ರೆಸ್ ಸರಕಾರದ ಪ್ರತಿನಿಧಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆ.07 ರಂದು ದೆಹಲಿಯಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ ಎಂದು ಹೇಳಿದ್ದಾರೆ. 

ಪ್ರತಿಭಟನೆ ಸ್ಥಳವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ.

2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ ಎಂದು ಡಿಕೆ ಶಿವಕುಮಾರ್ ಅಂಕಿ-ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್ ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಡಿಕೆ ಶಿವಕುಮಾರ್ ಆರೋಪ್ಿಸಿದ್ದಾರೆ.

2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. . ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ.

ನೀರಾವರಿ ಯೋಜನೆಯಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5,200 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಅದನ್ನು ನೀಡಿಲ್ಲ. ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ.

ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ.

ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಪ್ರತಿಭಟನೆಗೆ ರಾಜ್ಯದ ಎಲ್ಲಾ ಸಂಸದರಿಗೆ ಆಹ್ವಾನ ನೀಡಲಾಗುವುದು. ಎಲ್ಲರೂ ರಾಜ್ಯದ ಹಿತ ಕಾಯಲು ಪಕ್ಷಾತೀತವಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com