ಸರ್ಕಾರಿ ಹಾಸ್ಟೆಲ್‌ಗಳಿಗೆ ವಾರ್ಡನ್‌ಗಳ ನೇಮಿಸುವ ಕುರಿತು ವರದಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಸರ್ಕಾರಿ ಹಾಸ್ಟೆಲ್‌ಗಳಿಗೆ ವಾರ್ಡನ್‌ಗಳ ನೇಮಿಸುವ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಸರ್ಕಾರಿ ಹಾಸ್ಟೆಲ್‌ಗಳಿಗೆ ವಾರ್ಡನ್‌ಗಳ ನೇಮಿಸುವ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಾರ್ಡನ್ ಮತ್ತು ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಬಗ್ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿದ್ದು, ಎಸ್‌ಸಿ-ಎಸ್ಟಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ನಿರ್ದಿಷ್ಟವಾಗಿ ಗಮನಹರಿಸಿ ಸಮಗ್ರ ವರದಿಯನ್ನು ಎರಡು ವಾರಗಳಲ್ಲಿ ನೀಡುವಂತೆ ಆದೇಶಿಸಿದೆ. 

ಈ ಸರ್ಕಾರಿ ವಸತಿ ನಿಲಯಗಳ ಸ್ಥಿತಿಗತಿ ಕುರಿತು ಸುದ್ದಿ ವರದಿಗಳ ನಂತರ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಆರಂಭಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠದ ಆದೇಶವು ಬಂದಿದೆ. ಸಿಬ್ಬಂದಿ ಕೊರತೆ ಈ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಹೈಕೋರ್ಟ್ ವಿಚಾರಣೆ ವೇಳೆ ಗಮನಿಸಿದೆ.

ಹಾಸ್ಟೆಲ್‌ಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗವು ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ಪ್ರಕರಣದ ಅಮಿಕಸ್ ಕ್ಯೂರಿಯಾಗಿರುವ ವಕೀಲ ನಿತಿನ್ ರಮೇಶ್ ನ್ಯಾಯಾಲಯಕ್ಕೆ ತಿಳಿಸಿದರು. ಅಮಿಕಸ್ ಕ್ಯೂರಿ ಅವರ ಅಹವಾಲುಗಳನ್ನು ದಾಖಲಿಸಿದ ಹೈಕೋರ್ಟ್, ಸರ್ಕಾರವು ಇದಕ್ಕೆ ಸ್ಪಂದಿಸುವ ಅಗತ್ಯವಿದೆ ಮತ್ತು ಸಮಗ್ರ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದೆ. ಮುಂದಿನ ವಿಚಾರಣೆಗೂ ಮುನ್ನ ರಾಜ್ಯದ ವರದಿಯ ಪ್ರತಿಯನ್ನು ಅಮಿಕಸ್ ಕ್ಯೂರಿಗೆ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.

ತನ್ನ ಹಿಂದಿನ ನಿರ್ದೇಶನದಂತೆ ಸರ್ಕಾರಿ ಹಾಸ್ಟೆಲ್‌ಗಳಿಗೆ ವಾರ್ಡನ್‌ಗಳ ನೇಮಕಾತಿ ಪ್ರಕ್ರಿಯೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಇದೇ ವೇಳೆ ನೆನಪಿಸಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com