ಭಾರತದ ನಾವಿನ್ಯತಾ ಸೂಚ್ಯಂಕದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ವಿಶ್ವದಲ್ಲಿಯೇ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌ ಆಗಿದ್ದು, ಭಾರತದ ನಾವಿನ್ಯತಾ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ ಹಾಗೂ ದೇಶದ ಒಟ್ಟಾರೆ ರಫ್ತಿನಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.
ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ ಕ್ಯಾಂಪಸ್ ಉದ್ಘಾಟನಾ ಸಮಾರಂಭ
ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ ಕ್ಯಾಂಪಸ್ ಉದ್ಘಾಟನಾ ಸಮಾರಂಭ
Updated on

ಬೆಂಗಳೂರು: ಕರ್ನಾಟಕ ವಿಶ್ವದಲ್ಲಿಯೇ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌ ಆಗಿದ್ದು, ಭಾರತದ ನಾವಿನ್ಯತಾ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ ಹಾಗೂ ದೇಶದ ಒಟ್ಟಾರೆ ರಫ್ತಿನಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.

ಇಂದು ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಈ ಸಂಸ್ಥೆಯು, ತಂತ್ರಜ್ಞಾನದ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದ ಮುಕುಟಕ್ಕೆ ಹೊಸದೊಂದು ಗರಿ ಸೇರ್ಪಡೆಯಾದಂತಾಗಿದೆ ಎಂದರು.

ಫಾರ್ಚೂನ್‌ 500 ಕಂಪೆನಿಗಳಲ್ಲಿ 400 ಕ್ಕೂ ಹೆಚ್ಚು ಕಂಪೆನಿಗಳ ನೆಲೆಯಾಗಿರುವ ನಮ್ಮ ರಾಜ್ಯವು, ಸಂಶೋಧನೆ ಮತ್ತು ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿರುವುದಲ್ಲದೆ, ಸ್ಟಾರ್ಟಪ್‌ ರಾಜಧಾನಿ ಎಂಬ ಕೀರ್ತಿಗೂ ಭಾಜನವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರತಿಭಾನ್ವಿತ ಉದ್ಯೋಗಿಗಳು ಹಾಗೂ ಕೌಶಲಯುಕ್ತ ಮಾನವ ಸಂಪನ್ಮೂಲ ಹೇರಳವಾಗಿರುವ ಕರ್ನಾಟಕವು ಸಹಜವಾಗಿಯೇ ತಂತ್ರಜ್ಞಾನ ಹಾಗೂ ಜ್ಞಾನಾಧಾರಿತ ಉದ್ಯಮಗಳ ಮೊದಲ ಆಯ್ಕೆಯಾಗಿದೆ.
ಈ ಎಲ್ಲ ಕಾರಣಗಳಿಂದಾಗಿ ಕರ್ನಾಟಕವು ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ನಮ್ಮ ಸರ್ಕಾರ ಹೊಂದಿರುವ ಬದ್ಧತೆಯನ್ನು ಪುನರುಚ್ಛರಿಸಬಯಸುತ್ತೇನೆ. ಈ ನಿಟ್ಟಿನಲ್ಲಿ ವಿವಿಧ ವಲಯಗಳಿಗೆ ನಿರ್ದಿಷ್ಟ ನೀತಿ ಹಾಗೂ ಕೈಗಾರಿಕಾ ಸ್ನೇಹಿ ನೀತಿಗಳನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದೆ ಎಂದರು.

ಬೋಯಿಂಗ್‌ ಇಂಡಿಯಾದ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಕೇಂದ್ರದ ಆವರಣದ ಈ ಉದ್ಘಾಟನಾ ಸಮಾರಂಭವು ಜಾಗತಿಕ ಮಟ್ಟದಲ್ಲಿ ವಿಮಾನಯಾನ ವಲಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡುವ ಆಶಯಕ್ಕೆ ಮತ್ತಷ್ಟು ಪುಷ್ಟಿ ನೀಡುವಂತಿದೆ. ಬೋಯಿಂಗ್‌ ಸಂಸ್ಥೆಯು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಈ ಪ್ರದೇಶವನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತೋಷ ನೀಡಿದೆ. ಈ ಭಾಗವು ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿ ಹೊಸ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲು ಮುನ್ನುಡಿ ಬರೆದಿದೆ ಎಂದರು.

ಕರ್ನಾಟಕ, ದೇಶದ ಏರೋಸ್ಪೇಸ್‌ ವಲಯದಲ್ಲಿ ಪ್ರಾಬಲ್ಯವನ್ನು ಸಾಧಿಸಿದ್ದು, ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ರಫ್ತಿನ ಶೇ. 65 ರಷ್ಟು ಪಾಲನ್ನು ಹೊಂದಿದೆ. ಬೋಯಿಂಗ್‌ ನ ಈ ಹೊಸ ಉಪಕ್ರಮದಿಂದಾಗಿ ಸ್ಥಳೀಯ ಪ್ರತಿಭಾವಂತರಿಗೆ ಜಾಗತಿಕ ಮಟ್ಟದ ಯೋಜನೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ದೊರೆಯಲಿದೆ. 

ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಎಲ್ಲರ ಒಳಗೊಳ್ಳುವಿಕೆ ಹಾಗೂ ಎಲ್ಲರಿಗೂ ತಂತ್ರಜ್ಞಾನದ ಲಾಭ ದೊರಕುವಂತಾಗಬೇಕು ಎನ್ನುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಮಹಿಳೆಯರ ಅಭ್ಯುದಯ ಹಾಗೂ ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಸದಾ ಬೆಂಬಲ ನೀಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವುದು ಸಂತೋಷ ನೀಡಿದೆ. ಇದು ಕೇವಲ ಬೋಯಿಂಗ್‌ ಸಂಸ್ಥೆಗೆ ಮಾತ್ರವಲ್ಲ, ನಮ್ಮ ನಾಡಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com