
ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳು ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿದ್ದು, ಕುಡಿಯುವ ನೀರಿನ ಅಗತ್ಯ ಪೂರೈಸಲು ಕೊಯ್ನಾ ಮತ್ತು ಉಜ್ಜಯನಿ ಜಲಾಶಯಗಳಿಂದ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಮಾರ್ಚ್ 2025 ರ ಆರಂಭದಿಂದಲೂ ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಸಿಎಂ ಹೈಲೈಟ್ ಮಾಡಿದ್ದಾರೆ.
ಬೇಸಿಗೆ ಕಾಲದಲ್ಲಿ ಮಹಾರಾಷ್ಟ್ರ ಸರ್ಕಾರದ ಬೆಂಬಲದ ಅಗತ್ಯವನ್ನು ಒತ್ತಿ ಹೇಳಿದ ಸಿಎಂ, ಮನುಷ್ಯರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಹಿಂದೆಯೂ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದಕ್ಕಾಗಿ ಮತ್ತು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ.
ಪ್ರಸ್ತುತ, ಹೆಚ್ಚುತ್ತಿರುವ ತಾಪಮಾನ ಮತ್ತು ಹಿಪ್ಪರಗಿ ಬ್ಯಾರೇಜ್ ಮತ್ತು ಇತರ ಸ್ಥಳೀಯ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಮುಂಗಾರು ಆರಂಭವಾಗುವವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಹೀಗಾಗಿ, ಪರಿಸ್ಥಿತಿ ಹೆಚ್ಚು ಗಂಭೀರವಾಗುತ್ತಿದೆ.
ಈ ಹಿನ್ನೆಲೆಯಲ್ಲಿ, ಕರ್ನಾಟಕದ ಉತ್ತರ ಜಿಲ್ಲೆಗಳ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕನಿಷ್ಠ 2 ಟಿಎಂಸಿ ಮತ್ತು ಉಜ್ಜಯನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಎಂದು ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸಿಎಂಗೆ ಮನವಿ ಮಾಡಿದ್ದಾರೆ.
Advertisement