
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಕಡೆ ಮಳೆ ಸಾಧ್ಯತೆ ಇದೆ. ಹೀಗಾಗಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 3 ರಿಂದ ಏಪ್ರಿಲ್ 5ರವರೆಗೆ ಉಷ್ಣತೆಯೂ ಎರಡರಿಂದ ಮೂರು ಡಿಗ್ರಿ ಇಳಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರೀ ಮಳೆಯಾಗಿದೆ. ಮರಾಠವಾಡ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಂಡಮಾರುತ ಎದ್ದಿದೆ. ದಕ್ಷಿಣ ಛತ್ತೀಸ್‌ಗಢದಿಂದ ವಿದರ್ಭ ಮತ್ತು ಮರಾಠವಾಡ ಬಳಿಯ ಪ್ರದೇಶದ ಮೂಲಕ ಮಧ್ಯ ಮಹಾರಾಷ್ಟ್ರದವರೆಗೆ ಇದರ ಪರಿಣಾಮ ಇರಲಿದೆ.
ಇನ್ನೂ ಬೆಂಗಳೂರಿನಲ್ಲಿ ಮಂಗಳವಾರದಿಂದ ಮೋಡಕವಿದ ವಾತಾವರಣವಿದ್ದು, ಗುರುವಾರದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 4 ಶುಕ್ರವಾರ, 5 ಶನಿವಾರ ಹಾಗೂ 6 ಭಾನುವಾರದಂದು ಭಾರಿ ಮಳೆ ಹಿನ್ನೆಲೆ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದಾರೆ.
ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಇಂದು ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement