
ಚಿತ್ರದುರ್ಗ: ವೇಗವಾಗಿ ಬಂದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 150 A ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು 10 ಬಾರಿ ಪಲ್ಟಿಯಾಗುವುದನ್ನು ಕಾಣಬಹುದು.
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, 10 ಬಾರಿ ಪಲ್ಟಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಚಾಲಕ ಮೌಲಾ ಅಬ್ದುಲ್ (35) ಹಾಗೂ ಆತನ ಇಬ್ಬರು ಪುತ್ರರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆಯವರಾದ ಕುಟುಂಬ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement