
ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಜೊತೆಗೆ ಇಂದು ನಡೆಸಿದ ಸಭೆ ನಂತರ ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿಳಿಸಿದ್ದಾರೆ.
ಅಸಂಘಟಿತ ವಲಯದ ಈ ಕಾರ್ಮಿಕರಿಗೆ ಮೊದಲ ಬಾರಿಗೆ ಅಪಘಾತ ವಿಮೆ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರವು ಈಗ ಇನ್ನೊಂದು ಮಹತ್ವದ ನಿರ್ಧಾರ ಕೈಗೊಂಡು ಶ್ರಮಜೀವಿಗಳ ಬಗೆಗಿನ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ನೀಡಿದ್ದಾರೆ.
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು. ನಂತರ ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು ಎಂದು ತಿಳಿಸಿದ್ದಾರೆ.
"ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ" ಸ್ಥಾಪಿಸುವ ಐತಿಹಾಸಿಕ ತೀರ್ಮಾನಕ್ಕೆ ಇಂದು ಬರಲಾಗಿದ್ದು, ಸಂಬಂಧಿತ ಸಂಸ್ಥೆಗಳಿಂದ ಶೇ.5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ಹಂಚಿಕೊಂಡಿದ್ದಾರೆ.
ಸಂಬಂಧಪಟ್ಟ ಕಂಪನಿಗಳಿಂದ ಶೇ. 5 ರಷ್ಟು ಸೆಸ್ ಸಂಗ್ರಹಿಸುವಂತೆಯೇ, ರಾಜ್ಯ ಸರ್ಕಾರ ಗಿಗ್ ಕಾರ್ಮಿಕರ ಕಲ್ಯಾಣ ಯೋಜನೆಗಳನ್ನು ಬೆಂಬಲಿಸಲು ಅಗತ್ಯವಿರುವ ಹಣವನ್ನು ಒದಗಿಸುತ್ತದೆ."ಗಿಗ್ ಕಾರ್ಮಿಕರ ಕಲ್ಯಾಣದ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಸಮಗ್ರ ಮಸೂದೆ ಸಿದ್ದಪಡಿಸಿ, ಅನುಮೋದನೆಗಾಗಿ ರಾಜ್ಯ ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಮೂವರು ಗಿಗ್ ವರ್ಕರ್ ಪ್ರತಿನಿಧಿಗಳಾದ ರಕ್ಷಿತಾ ದೇವ್, ಶೇಖ್ ಸಲಾವುದ್ದೀನ್ ಮತ್ತು ನಿಖಿಲ್ ದೇವ್ ಅವರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಅವರು ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಸಭೆಯಲ್ಲಿ ರಾಜ್ಯ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ ಬಿ ಪಾಟೀಲ್ ಉಪಸ್ಥಿತರಿದ್ದರು.
ಈ ಹಿಂದೆ ಭಾರತ್ ಜೋಡೋ ಯಾತ್ರೆಯ ವೇಳೆ ಗಿಗ್ ಕಾರ್ಮಿಕರ ಹಕ್ಕುಗಳಿಗಾಗಿ ಪ್ರತಿಪಾದಿಸಿದ್ದ ರಾಹುಲ್ ಗಾಂಧಿ, ಕಾರ್ಮಿಕ ಇಲಾಖೆ ಸಿದ್ಧಪಡಿಸಿದ ಎಂಟು ಅಂಶಗಳ ಪ್ರಸ್ತಾವನೆಯನ್ನು ಸ್ವಾಗತಿಸಿದ್ದಾರೆ. ಗಿಗ್ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ತ್ವರಿತ ಅನುಷ್ಠಾನದ ಅಗತ್ಯವನ್ನು ಒತ್ತಿ ಹೇಳಿದ್ದಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ಕರ್ನಾಟಕ ಕಾರ್ಮಿಕ ಇಲಾಖೆಯು ಕಾರ್ಮಿಕರ ಗ್ರಾಚ್ಯುಟಿ, ಸಿನಿಮಾ ಕಾರ್ಮಿಕರ ಹಕ್ಕುಗಳು ಮತ್ತು ಈಗ ಗಿಗ್ ಕಾರ್ಮಿಕರ ಕಲ್ಯಾಣವನ್ನು ಒಳಗೊಂಡ ಮೂರು ಪ್ರಮುಖ ಮಸೂದೆಗಳನ್ನು ಈಗಾಗಲೇ ಪರಿಚಯಿಸಿದೆ. ಅಸಂಘಟಿತ ಕಾರ್ಮಿಕರ ವಲಯವು ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದೆ ಮತ್ತು ಈ ಪ್ರಗತಿಪರ ಕ್ರಮಕ್ಕೆ ಸಂಪೂರ್ಣ ಬೆಂಬಲವನ್ನು ನೀಡಿದೆ ಎಂದು ಲಾಡ್ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.
Advertisement