
ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಎಚ್ಚರಿಕೆ ನೀಡಿದ್ದು, ಶೌಚಾಲಯ ಸ್ವಚ್ಛಗೊಳಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸದಂತೆ ನಿರ್ದೇಶಿಸಿದೆ.
ನಿಯಮ ಉಲ್ಲಂಘಿಸಿದರೆ ಕಾರಣವಾದ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಶಿಸ್ತು ಕ್ರಮಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಬೇಗೂರು ಪೊಲೀಸ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ಘಟನೆಯ ನಂತರ ಈ ಸುತ್ತೋಲೆ ಹೊರಡಿಸಲಾಗಿದೆ.
ಮಕ್ಕಳ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಸಾಮಾಜಿಕ ಕಾರ್ಯಕರ್ತ ನಾಗೇಶ್ ದೂರು ದಾಖಲಿಸಿದ ನಂತರ ಮಾರ್ಚ್ 29 ರಂದು ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.
2023 ರಲ್ಲಿ ಶಾಲೆಗಳಿಗೆ ಮಕ್ಕಳನ್ನು ಶೌಚಾಲಯ ಸ್ವಚ್ಛಗೊಳಿಸಲು ಬಳಕೆ ಮಾಡಿಕೊಳ್ಳದಂತೆ ಸೂಚಿಸಿ ಸುತ್ತೋಲೆ ಹೊರಡಿಸಿದ್ದರೂ, ಕೆಲವು ಶಾಲೆಗಳು ಆದೇಶವನ್ನು ಉಲ್ಲಂಘಿಸುತ್ತಲೇ ಇವೆ ಎಂದು ಇಲಾಖೆ ಗಮನಿಸಿದೆ.
Advertisement