
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವುದರಿಂದಾಗಿ ರಾಜ್ಯದ ಮೇಲೆ ಪರಿಣಾಮ ಉಂಟಾಗಿದ್ದು, ಇಂದಿನಿಂದ ಏ.17 ವರೆಗೆ ಬೆಂಗಳೂರು ಸೇರಿ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಪರಿಣಾಮವಾಗಿಯೇ ಮುಂಗಾರು ಪೂರ್ವ ಮಳೆ ಚುರುಕಾಗುತ್ತಿದ್ದು, ಒಂದು ವಾರ ಸಮೃದ್ಧ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲ ಝಳವೂ ಹೆಚ್ಚಾಗಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು IMD ವರದಿ ಹೇಳಿದೆ. ಏ.08 ರಂದು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ 4 ಸೆಂಟೀಮೀಟರ್ ಮಳೆಯಾಗಿದೆ. ಇನ್ನು ಬೆಂಗಳೂರಿನಲ್ಲಿ 24 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ 35 ಡಿಗ್ರಿ ಮತ್ತು ಕನಿಷ್ಟ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
Advertisement