
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು 17 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಿಂಡ್ಲು ಎಂಬಲ್ಲಿ ನಡೆದಿದೆ. ಸಪ್ತಗಿರಿ ಲೇಔಟ್ ನಿವಾಸಿಯಾಗಿರುವ ವಿದ್ಯಾರ್ಥಿನಿ ತನ್ನ ಅಪಾರ್ಟ್ ಮೆಂಟ್ ನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆ ಸಾವನ್ನಪ್ಪಿದ್ದಾಳೆ.
ಮೃತ ವಿದ್ಯಾರ್ಥಿನಿ ತಂದೆ ಉದ್ಯಮಿಯಾಗಿದ್ದು ಆಂಧ್ರಪ್ರದೇಶ ಮೂಲದರು. ಅವಳು ಸಿಇಟಿ ಮತ್ತು ಇತರ ಪರೀಕ್ಷೆಗಳಿಗೆ ಅಧ್ಯಯನ ಮಾಡಲು ಟೆರೇಸ್‌ಗೆ ಹೋಗಿದ್ದಳು ಎಂದು ಪೋಷಕರು ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಪೊಲೀಸರ ಪ್ರಕಾರ, ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದೆಂದು ತನ್ನ ಪೋಷಕರ ಬಳಿ ಆತಂಕ ವ್ಯಕ್ತ ಪಡಿಸಿದ್ದಳು, ಆದರೂ ಯಾವುದೇ ಡೆತ್ ನೋಟ್ ಕಂಡುಬಂದಿಲ್ಲ. ವಿದ್ಯಾರಣ್ಯಪುರ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Advertisement