ವಿವಾದಿತ ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ, ಏಪ್ರಿಲ್ 17ಕ್ಕೆ ಅಂತಿಮ ತೀರ್ಮಾನ

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಬಗ್ಗೆ ಚರ್ಚಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿ ಅನುಷ್ಠಾನದ ಸಂಬಂಧ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಬಗ್ಗೆ ಚರ್ಚಿಸಲಾಗಿದ್ದು, ಜಾರಿಗೊಳಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದೆಂದು ನಿರ್ಧರಿಸಲಾಯಿತು.

ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಾತಿ ಜನಗಣತಿ ಲಕೋಟೆ ಓಪನ್ ಮಾಡಿ, ಸಚಿವರ ಕೈಗೆ ನೀಡಿದರು. ಬಳಿಕ ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯ ಆಲಿಸಿದ ಸಿದ್ದರಾಮಯ್ಯ, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದರು.

"ಕೆಲವು ಸಚಿವರು ಮೊದಲು ಜಾತಿ ಗಣತಿ ವರದಿಯ ಶಿಫಾರಸುಗಳನ್ನು ಪರಿಶೀಲಿಸಲು ಬಯಸಿದ್ದಾರೆ. ಹೀಗಾಗಿ ಏಪ್ರಿಲ್ 17 ರಂದು ನಡೆಯುವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್
ಜಾತಿ ಗಣತಿ ವರದಿ: ಸಚಿವ ಸಂಪುಟ, ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಏಪ್ರಿಲ್ 17 ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಜಾತಿ ಜನಗಣತಿಯ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

ಜಾತಿ ಜನಗಣತಿ ವರದಿಯು 50 ಸಂಪುಟಗಳಲ್ಲಿದೆ. ಇದು 1.38 ಕೋಟಿ ಕುಟುಂಬಗಳ 5.98 ಕೋಟಿ ಜನರನ್ನು ಒಳಗೊಂಡಿದೆ.

"ಇದು ಶೇಕಡಾ 94.77 ಜನರನ್ನು ಒಳಗೊಂಡಿದೆ. ಕೇವಲ ಶೇಕಡಾ 5.23 ರಷ್ಟು ಜನ ಮಾತ್ರ ಇದರ ವ್ಯಾಪ್ತಿಯಿಂದ ಹೊರಗಿದ್ದಾರೆ" ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಜಾತಿ ಗಣತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಫೆಬ್ರವರಿ 29, 2024 ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು. ಆದರೆ ಈ ವರದಿಗೆ ಕಾಂಗ್ರೆಸ್‌ನಲ್ಲೇ ಆಂತರಿಕವಾಗಿ ವಿರೋಧ ವ್ಯಕ್ತವಾಗಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ನಾಯಕರುಗಳು ವರದಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com