
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ. ಮುಹಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಕುರಿತಂತೆ ಯಾವುದೇ ಅಂತಿಮ ನಿರ್ಧಾರವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿಲ್ಲ. ಇನ್ನು ಹಗರಣದ ಕುರಿತಂತೆ ತನಿಖೆ ಮುಂದೂವರೆಸಲು ಲೋಕಾಯುಕ್ತಕ್ಕೆ ಸೂಚನೆ ನೀಡಿದ್ದು ಮುಂದಿನ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದರು. ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ತಕಾರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಕರಣ ಸಂಬಂಧ ಯಾವುದೇ ತೀರ್ಪು ನೀಡಿಲ್ಲ. ಬದಲಿಗೆ ಲೋಕಾಯುಕ್ತ ಪೊಲೀಸರಿಗೆ ತನಿಖೆಗೆ ಮುಂದೂವರೆಸಲು ಸೂಚಿಸಿದ್ದು ಸಂಪೂರ್ಣ ವರದಿ ಸಲ್ಲಿಸಿದ ಬಳಿಕ ಮುಂದಿನ ಆದೇಶ ನೀಡಲಿದೆ. ಇನ್ನು ಇದೇ ಪ್ರಕರಣ ಸಂಬಂಧ ಇಡಿ ಸಹ ತಕರಾರು ಅರ್ಜಿ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ.
ಇದಕ್ಕೂ ಮೊದಲು, ಸಿದ್ದರಾಮಯ್ಯ ಮತ್ತು ಇತರ ಮೂವರ ವಿರುದ್ಧದ ಆರೋಪಗಳ ವಿಚಾರಣೆಯ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದಾಗ್ಯೂ, ತನಿಖೆಯನ್ನು ಕೇವಲ ನಾಲ್ವರು ವ್ಯಕ್ತಿಗಳಿಗೆ ಸೀಮಿತಗೊಳಿಸಬಾರದು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದ್ದು, ಭಾಗಿಯಾಗಿರುವ ಎಲ್ಲರನ್ನೂ ತನಿಖೆ ಮಾಡಿ ಸಮಗ್ರ ವರದಿ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ.
ಈ ಪ್ರಕರಣವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಗಳು ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿ ವಸತಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಇದರಿಂದ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರು ಸೇರಿದಂತೆ ಕೆಲವು ವ್ಯಕ್ತಿಗಳಿಗೆ ಹೆಚ್ಚಿನ ಲಾಭವಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಯಕರ್ತೆ ಸ್ನೇಹಮಾಯಿ ಕೃಷ್ಣ ಸಲ್ಲಿಸಿದ ದೂರಿನ ಮೇರೆಗೆ ಲೋಕಾಯುಕ್ತರು ತನಿಖೆ ಆರಂಭಿಸಿತ್ತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. 50:50 ಅನುಪಾತದಡಿ ನಿವೇಶನಗಳನ್ನು ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು, ಅಂದಾಜು 5,000 ಕೋಟಿ ರೂ.ನಷ್ಟು ಭಾರೀ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.
ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ. 464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಬಳಸಿಕೊಂಡಿತ್ತು. ಇದಕ್ಕೆ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿತ್ತು. ನಂತರ ತನಗೆ ಪ್ರಾಧಿಕಾರ ನೀಡಿದ್ದ 14 ಸೈಟುಗಳನ್ನು ವಾಪಸ್ ನೀಡುವುದಾಗಿ ಪಾರ್ವತಿ ಸಿದ್ದರಾಮಯ್ಯ ಘೋಷಿಸಿದ್ದರು.
Advertisement