ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ: 3 ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ್ಯದ ಬಳಿ ನಡೆದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.
ಬೆಂಗಳೂರಿನಿಂದ ಮೈಸೂರು ಕಡೆಗೆ ವೇಗವಾಗಿ ಬರುತ್ತಿದ್ದ ಹೋಂಡಾ ಸಿವಿಕ್ ಕಾರಿನ ಚಾಲಕ, ಲಂಬಾಣಿ ತಾಂಡ್ಯದ ಬಳಿ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕದ ಮೇಲೆ ಕಾರು ಹತ್ತಿಸಿದ್ದಾನೆ. ಕಾರು ಪಲ್ಟಿಯಾಗಿ ಪಕ್ಕದ ರಸ್ತೆಗೆ ಜಿಗಿದು, ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಾರುತಿ ಡಿಸೈರ್ ಮತ್ತು ವ್ಯಾಗನರ್ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೂರೂ ಕಾರುಗಳಲ್ಲಿದ್ದ 10 ಮಂದಿಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ನೆರವಿನಿಂದ ಅಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ