ಜಾತಿ ಗಣತಿ ವರದಿ ಬಗ್ಗೆ ಯಾವುದೇ ತೀರ್ಮಾನ ಇಲ್ಲ; ಮುಂದಿನ ಸಚಿವ ಸಂಪುಟದಲ್ಲಿ ವಿಸ್ತೃತ ಚರ್ಚೆ

ಸಭೆಯಲ್ಲಿ ಸಚಿವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಯಾರೂ ಸಹ ಜಾತಿ ಗಣತಿ ವರದಿಯನ್ನು ವಿರೋಧಿಸಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Updated on

ಬೆಂಗಳೂರು: ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯದಲ್ಲಿ ವಿವಾದದ ಕಿಡಿ ಹೊತ್ತಿಸಿದ್ದು, ಈ ಕುರಿತು ಚರ್ಚಿಸಲು ಗುರುವಾರ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟವು ಯಾವುದೇ ಪ್ರಮುಖ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಜಾತಿ ಗಣತಿ ವರದಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು. ಅದಕ್ಕು ಮುನ್ನ ಲಿಖಿತವಾಗಿ ಅಥವಾ ಮೌಖಿಕವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಕೇಳಿಕೊಂಡಿದ್ದಾರೆ ಎಂದು ಹೇಳಿದರು.

ವಿವಿಧ ಸಮುದಾಯಗಳು, ವಿಶೇಷವಾಗಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರು ಈ ಜಾತಿ ಗಣತಿ ವರದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಮತ್ತು ಇದನ್ನು "ಅವೈಜ್ಞಾನಿಕ" ಎಂದು ಕರೆದಿದ್ದಾರೆ. ಅಲ್ಲದೆ ವರದಿಯನ್ನು ತಿರಸ್ಕರಿಸಬೇಕು ಮತ್ತು ಹೊಸ ಸಮೀಕ್ಷೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Survey: '10% ತಪ್ಪಾಗಿರಬಹುದು.. ನಾಯಿ ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಆಗಿಲ್ಲ'- ಕಾಂಗ್ರೆಸ್ ನಾಯಕ HM Revanna

"ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ. ವಿಸ್ತೃತ ಚರ್ಚೆಗೆ ಹೆಚ್ಚಿನ ಮಾಹಿತಿ ಮತ್ತು ತಾಂತ್ರಿಕ ವಿವರಗಳು ಅಗತ್ಯವಿದೆ ಎಂದು ಭಾವಿಸಲಾಗಿದೆ. ಆದ್ದರಿಂದ, ಹಿರಿಯ ಅಧಿಕಾರಿಗಳಿಗೆ ಅದನ್ನು ಒದಗಿಸಲು ಸೂಚಿಸಲಾಗಿದೆ. ಇಂದಿನ ಚರ್ಚೆ ಅಪೂರ್ಣವಾಗಿತ್ತು" ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

ಚರ್ಚೆಗಳು ಸೌಹಾರ್ದಯುತ ವಾತಾವರಣದಲ್ಲಿ ನಡೆದವು ಮತ್ತು ಜನಸಂಖ್ಯೆ, ಹಿಂದುಳಿದಿರುವಿಕೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಮಯದಲ್ಲಿ ಬಳಸಲಾದ ನಿಯತಾಂಕಗಳು, ಪರಿಗಣಿಸಲಾದ ಆರ್ಥಿಕ ನಿಯತಾಂಕಗಳಂತಹ ಹಲವಾರು ವಿಷಯಗಳ ಬಗ್ಗೆ ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದೆ ಎಂದು ಎಚ್ ಕೆ ಪಾಟೀಲ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಇಂದು ಚರ್ಚೆ ಅಪೂರ್ಣವಾಗಿದ್ದರಿಂದ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು.

"ಮುಂದಿನ ಸಚಿವ ಸಂಪುಟ ಸಭೆ ಚಾಮರಾಜನಗರ ಜಿಲ್ಲೆಯ ಎಂಎಂ ಹಿಲ್ಸ್‌ನಲ್ಲಿ ಏಪ್ರಿಲ್ 24 ರಂದು ನಡೆಯಲಿದೆ. ಆದರೆ ಈ ಸಭೆಯಲ್ಲಿ ಆ ಪ್ರದೇಶದ ಅಭಿವೃದ್ಧಿ ವಿಷಯಗಳ ಮೇಲೆ ಕೇಂದ್ರೀಕರಿಸಲಾಗುವುದು. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಮತ್ತೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ" ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಸಚಿವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಯಾರೂ ಸಹ ಜಾತಿ ಗಣತಿ ವರದಿಯನ್ನು ವಿರೋಧಿಸಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

ಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳಬೇಕೋ ಅಥವಾ ನಿರಾಕರಣೆ ಮಾಡಬೇಕೋ ಎಂಬ ನಿಟ್ಟಿನಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಲಿದೆ ಎಂದು ಹಲವು ಸಚಿವರು ತಿಳಿಸಿದ್ದಾರೆ. ಹೀಗಾಗಿ ಮೇ 2 ರಂದು ನಡೆಯುವ ಮುಂದಿನ ಸಚಿವ ಸಂಪುಟದಲ್ಲಿ ಮತ್ತೆ ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com