ಜನಿವಾರ ವಿವಾದ: ರಾಜ್ಯ ಸರ್ಕಾರ, KEAಗೆ ಹೈಕೋರ್ಟ್ ನೋಟಿಸ್

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.
High court
ಹೈಕೋರ್ಟ್
Updated on

ಬೆಂಗಳೂರು: "ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ 'ಸಾಮಾನ್ಯ ಪ್ರವೇಶ ಪರೀಕ್ಷೆ' (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ" ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ಶನಿವಾರ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಸಿಇಟಿ ಮರು ಪರೀಕ್ಷೆ ನಡೆಸಲು ಅಗತ್ಯ ಆದೇಶಗಳನ್ನು ನೀಡಬೇಕೆಂದು ಯಾಲಯದ ಮುಂದೆ ಮನವಿ ಮಾಡಿದರು. ರಾಜ್ಯ ಸರ್ಕಾರ ಮತ್ತು ಕೆಇಎ ಕ್ರಮವು ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿದರು.

ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆಗಳು ನಡೆದಿದ್ದು, ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು, ಈ ಸಮಯದಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳ ಪ್ರತಿರೋಧದ ಹೊರತಾಗಿಯೂ ಅವರ ಜನಿವಾರವನ್ನು ಬಲವಂತವಾಗಿ ಕತ್ತರಿಸಲಾಗಿದೆ. ಜನಿವಾರ ತೆಗೆದುಹಾಕಲು ನಿರಾಕರಿಸಿದವರಿಗೆ ಪರೀಕ್ಷೆ ಬರೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಬೀದರ್, ಶಿವಮೊಗ್ಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇಂತಹ ಘಟನೆಗಳು ನಡೆದಿವೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದರು.

ಜನಿವಾರವನ್ನು ಬಲವಂತವಾಗಿ ತೆಗೆದುಹಾಕುವುದು ಧಾರ್ಮಿಕ ನಂಬಿಕೆಗಳನ್ನು ಉಲ್ಲಂಘಿಸಿದಂತೆ. ಈ ಕೃತ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಇನ್ನೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಹೇಳಿದರು.

High court
ಜನಿವಾರ ತೆಗೆಸಿದ ಪ್ರಕರಣ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಬಿಜೆಪಿ ದೂರು

ಯಾರು ಪರೀಕ್ಷೆಯಿಂದ ವಂಚಿತರಾಗಿದ್ದಾರೋ ಅಂತಹ ವಿದ್ಯಾರ್ಥಿಗಳಿಗಾಗಿ ಮತ್ತೊಮ್ಮೆ ಸಿಇಟಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ತಪಾಸಣೆಗೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವಂತೆಯೂ ನಿರ್ದೇಶಿಸಬೇಕು.

ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಿಸಿದ ಕ್ರಮವನ್ನು ಅಸಾಂವಿಧಾನಿಕ, ಏಕಪಕ್ಷೀಯ ಮತ್ತು ಅಕ್ರಮ ಎಂದು ಸಾರಬೇಕು. ಜನಿವಾರ ಧರಿಸುವ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಬಾರದು ಮತ್ತು ಅವರ ಧಾರ್ಮಿಕ ಆಚರಣೆಯ ಹಕ್ಕಿನಲ್ಲಿ ಮಧ್ಯಪ್ರವೇಶ ಮಾಡದಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಕೋರಿದರು.

ಈ ವೇಳೆ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಜನಿವಾರ ತೆಗೆಸಲು ಮುಂದಾದ ಕಾರಣದಿಂದ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೂ ಸರ್ಕಾರಿ ಸೀಟು ನೀಡುವುದಕ್ಕೆ ನಿರ್ಧರಿಸಲಾಗಿದೆ. ಈ ಘಟನೆ ಉದ್ದೇಶಪೂರ್ವಕವಾಗಿ ಮಾಡಿಲ್ಲ. ಇದು ಸರ್ಕಾರಕ್ಕೂ ನೋವುಂಟು ಮಾಡಿದೆ. ತಪ್ಪಿತಸ್ಥ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಈ ಅಂಶವನ್ನು ಪೀಠಕ್ಕೆ ವಿವರಿಸಲಾಗುವುದು ಎಂದು ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com