
ಬೆಂಗಳೂರು: ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜನಪ್ರತಿನಿಧಿಗಳ ಕೋರ್ಟ್ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡುತ್ತಲೇ ಈ ಕುರಿತು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ತೀರ್ಪು ಪ್ರಕಟಿಸಿದೆ.
ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ. ಅಲ್ಲದೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಘೋಷಿಸಿದೆ.
ನಟ ರಮ್ಯಾ ಪ್ರತಿಕ್ರಿಯೆ
ಇನ್ನು ಅತ್ತ ಕೋರ್ಟ್ ಪ್ರಜ್ವಲೇ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸುತ್ತಲೇ ಇತ್ತ ನಟಿ ಹಾಗೂ ಮಂಡ್ಯದ ಮಾಜಿ ಸಂಸದೆ ರಮ್ಯಾ ಈ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ನಟಿ ರಮ್ಯಾ, 'Well done HC! Justice served for all the women! (ಕೋರ್ಟ್ ತೀರ್ಪು ಶ್ಲಾಘನೀಯ.. ಎಲ್ಲ ಸಂತ್ರಸ್ಥ ಮಹಿಳೆಯರಿಗೆ ನ್ಯಾಯ ದೊರೆತಿದೆ) ಎಂದು ಸತೀಶ್ ಆಚಾರ್ಯ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.
ಅಂತೆಯೇ ಇದೇ ವಿಚಾರವಾಗಿ ರಾಷ್ಟ್ರೀಯ ವಾಹಿನಿಯೊಂದಿಗೆ ಮಾತನಾಡಿರುವ ಮತ್ತೋರ್ವ ಕಾಂಗ್ರೆಸ್ ನಾಯಕಿ ಲಾವಣ್ಯ ಬಲ್ಲಾಳ್ ಜೈನ್, 'ಕೋರ್ಟ್ ನ ಈ ತೀರ್ಪು ಅತ್ಯಂತ ಮಹತ್ವದ್ದಾಗಿದ್ದು, ಇದು ಬಹಳಷ್ಟು ಮಹಿಳೆಯರು ಧೈರ್ಯವಾಗಿ ಮಾತನಾಡಲು ಮತ್ತು ನ್ಯಾಯವನ್ನು ಪಡೆಯಲು ಪ್ರೋತ್ಸಾಹಿಸುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.
Advertisement