
ದಕ್ಷಿಣ ಕನ್ನಡ: ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಮಾದಕ ದ್ರವ್ಯ ಕಳ್ಳಸಾಗಣೆ ತಡೆ ಕಾರ್ಯಾಚರಣೆಯಲ್ಲಿ 123 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಆಂಧ್ರಪ್ರದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್‌ನ ಮಠದಕೆರೆ ಬಳಿ ಎರಡು ಕಾರುಗಳನ್ನು ಅಡ್ಡಗಟ್ಟಿದ್ದಾರೆ. ಈ ಕಾರುಗಳಲ್ಲಿ ನಿಷೇಧ ವಸ್ತುಗಳನ್ನು ರಾಜ್ಯದ ಗಡಿಗಳಲ್ಲಿ ಕಳ್ಳಸಾಗಣೆ ಮಾಡಲಾಗುತಿತ್ತು ಎಂದು ವರದಿಯಾಗಿದೆ.
ಬಂಧಿತ ವ್ಯಕ್ತಿಗಳನ್ನು ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಮಸೂದ್ ಎಂ ಕೆ (45), ಮೊಹಮ್ಮದ್ ಆಶಿಕ್ (24) ಮತ್ತು ಸುಬೈರ್ (30) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಂಜಾದ ಜೊತೆಗೆ ಎರಡು ಕಾರುಗಳು ಮತ್ತು ಐದು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಇವುಗಳ ಒಟ್ಟು ಮೌಲ್ಯ ರೂ. 46.2 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (NDPS) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಅಂತರ್ ರಾಜ್ಯ ಮಾದಕ ದ್ರವ್ಯ ಜಾಲ ನಿರ್ಮೂಲನೆಯ ಪ್ರಯತ್ನದ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ವಶಕ್ಕೆ ಪಡೆದ ಗಾಜಾ ಪೂರೈಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement