
ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಗುರುತಿಸುವ ಉಪಕ್ರಮದ ಭಾಗವಾಗಿ, ಮಾನದಂಡಗಳ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಐದು ಸದಸ್ಯರ ಸಮಿತಿಯನ್ನು ರಚಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ.
ಸಮಿತಿಯಲ್ಲಿ ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್, ಉಪ ಕಾರ್ಯದರ್ಶಿ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ ಶೆಟ್ಟಿ ಸದಸ್ಯರಾಗಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ಮತ್ತೊಂದು ಪ್ರಾದೇಶಿಕ ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದ್ದು. ಈ ಬಗ್ಗೆ ಅಲ್ಲಿ ಅಳವಡಿಸಿಕೊಳ್ಳಳಾಗಿರುವ ಮಾನದಂಡಗಳು, ಕಾರ್ಯವಿಧಾನದ ಚೌಕಟ್ಟನ್ನು ಸಮಿತಿ ಅಧ್ಯಯನ ನಡೆಸಲಿದೆ.
ಸರ್ಕಾರ ಈ ಹಿಂದೆ ಆಂಧ್ರಪ್ರದೇಶ ಭಾಷ ನೀತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿತ್ತು. ಇದೀಗ ಆಂಧ್ರಪ್ರದೇಶವು ಎರಡನೇ ಅಧಿಕೃತ ಭಾಷೆಯ ಸ್ಥಾನಮಾನವನ್ನು ಹೇಗೆ ಜಾರಿಗೆ ತಂದಿದೆ ಎಂಬುದರ ಕುರಿತು ಸಮಗ್ರ ತಿಳುವಳಿಕೆಯನ್ನು ಪಡೆಯಲು ಬಯಸಿದ್ದು, ಅದರ ವ್ಯಾಪ್ತಿ, ರೂಪ ಮತ್ತು ಕಾನೂನು ಮಾನ್ಯತೆ ಸೇರಿದಂತೆ ಇತರೆ ವಿಚಾರಗಳ ಕುರಿತು ಅಧ್ಯಯನ ನಡೆಸಿ, ಮೂರು ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಿದೆ.
Advertisement