
ಬೆಂಗಳೂರು: ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ಹೊಸ ಮೆಟ್ರೋ ಮಾರ್ಗಕ್ಕೆ ಶಂಕು ಸ್ಥಾಪನೆ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದು, ನವದೆಹಲಿಯಿಂದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಸುಧಾಕರ್ ರೆಡ್ಡಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ.ಶೈಲೇಂದ್ರ ಬೆಲ್ದಾಳೆ, ಸುರೇಶ್ ಗೌಡ, ಎಂಎಲ್ಸಿ ಮಾರುತಿರಾವ್ ಮುಳೆ, ಸರ್ಕಾರದ ಮುಖ್ಯ ಕಾರ್ಯಕರ್ಶಿ ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್. ಜಿ ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು.
ಈಗಾಗಲೇ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಮೋದಿಯವರು ಮೆಜೆಸ್ಟಿಕ್ ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಭೇಟಿ ನೀಡಲಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಬೆಳಗಾವಿ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ.
ನಂತರ ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಇನ್ನೂ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಲಿದ್ದಾರೆ.
ಬಳಿಕ ನಂತರ ಹಳದಿ ಮಾರ್ಗದಲ್ಲಿರುವ ಆರ್‌ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ.
https://x.com/PTI_News/status/195441999411407703811:45 ರಿಂದ 12:50 ರ ನಡುವೆ ಹಳದಿ ಮಾರ್ಗಕ್ಕೆ (5 ತಲುಪುವ) ಹಸಿರು ನಿಶಾನೆ ತೋರಿ, ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣಕ್ಕೆ ಮೆಟ್ರೋ ಮೂಲಕ ಸಂಚರಿಸಲಿದ್ದಾರೆ.
ಅಲ್ಲಿಂದ ಬೆಂಗಳೂರಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT) ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ ಹಂತ-3ಕ್ಕೆ ಅಡಿಪಾಯ ಹಾಕಲಿದ್ದಾರೆ. ಬಳಿಕ ಆರ್‌ವಿ ರಸ್ತೆ (ರಾಗಿಗುಡ್ಡ)ಯಿಂದ ಬೊಮ್ಮಸಂದ್ರ ನಿಲ್ದಾಣದವರೆಗಿನ ಹಳದಿ ಮಾರ್ಗವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.
ನಂತರ ಹೆಲಿಕಾಪ್ಟರ್‌ನಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ ಮಧ್ಯಾಹ್ನ 2.45 ಕ್ಕೆ ದೆಹಲಿಗೆ ಹಿಂತಿರುಗಲಿದ್ದಾರೆ.
Advertisement