ಬೆಂಗಳೂರಿನಲ್ಲಿ ವಾರಾಂತ್ಯದವರೆಗೂ ಭಾರೀ ಮಳೆ: Yellow ಅಲರ್ಟ್ ಘೋಷಣೆ
ಬೆಂಗಳೂರು: ಬುಧವಾರ ದಿನವಿಡೀ ಸುರಿದ ಮಳೆಯಿಂದಾಗಿ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇಂದೂ ಕೂಡ ಮೋಡ ಕವಿದ ವಾತಾವರಣ ಮುಂದವರೆದಿದ್ದು, ವಾರಾಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಗರದಲ್ಲಿ ಬುಧವಾರ ಸುರಿದ ಮಳೆಗೆ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದವು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು.
ಮಳೆ ಹಾಗೂ ನೀರು ತುಂಬಿದ್ದ ಪರಿಣಾಮ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಧಾನವಾಗಿತ್ತು. ನೀರಿನಿಂದ ತುಂಬಿದ ಅಂಡರ್‌ಪಾಸ್‌ಗಳಲ್ಲಿ ಸಂಚರಿಸಲು ಸವಾರರು ಹೆಣಗಾಡುವಂತಾಗಿತ್ತು. ಪಾದಚಾರಿಗಳೂ ಕೂಡ ಓಡಾಡಲು ಸಮಸ್ಯೆಗಳನ್ನು ಎದುರಿಸಿದರು.
ಮುಂದಿನ 36 ಗಂಟೆಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಇದು ವಾರಾಂತ್ಯದವರೆಗೆ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದ್ದು, ಎಲ್ಲೋ ಅಲರ್ಟ್ ಘೋಷಿಸಿದೆ.
ಬಂಗಾಳಕೊಲ್ಲಿಯ ಪಶ್ಚಿಮ-ಮಧ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಅಥವಾ ಕಡಿಮೆ ತೀವ್ರತೆ ಎದುರಾಗಿದೆ. ಇದರ ಪರಿಣಾಮವಾಗಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಅವಧಿಗೆ ಮಳೆ ಆರ್ಭಟ ಇರಲಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗುರುವಾರ ಮತ್ತು ಶುಕ್ರವಾರ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಕನಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮಾಹಿತಿ ನೀಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ