
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ರಾತ್ರಿ ಇಡೀ ನಿದ್ರೆ ಇಲ್ಲದೆ ಸಮಯ ಕಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದ್ದು, ಬಂಧನದ ಬಳಿಕ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದ್ದು ಎಲ್ಲ ಆರೋಪಿಗಳು ಸೆರೆವಾಸ ಅನುಭವಿಸುತ್ತಿದ್ದಾರೆ. ಗುರುವಾರ ಬಂಧಿಸಲ್ಪಟ್ಟ ನಟ ದರ್ಶನ್, ಖಿನ್ನತೆಗೆ ಒಳಗಾಗಿದ್ದಾರೆ. ರಾತ್ರಿ ಇಡೀ ನಿದ್ರೆ ಮಾಡದೇ ಸಮಯ ಕಳೆದಿರುವ ದರ್ಶನ್ ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ದರ್ಶನ್ ರಾತ್ರಿ ನಿದ್ರೆ ಮಾಡದೇ ಕಾರಾಗೃಹದ ಕೋಣೆಯಲ್ಲಿ ಸಮಯ ಕಳೆದಿದ್ದಾರೆ. ಖಿನ್ನತೆಯಿಂದ ಬಳಲುತ್ತಿರುವ ದರ್ಶನ್ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಗೆ ಗೈರು ಹಾಜರಾಗಿದ್ದಾರೆ ಎಂದು ವರದಿಯಾಗಿದೆ.
ದರ್ಶನ್ ಗೆ ಖಿನ್ನತೆ
ವರದಿಯಲ್ಲಿರುವಂತೆ ನಟ ದರ್ಶನ್ ಜೊತೆಗೆ, ಅಶ್ಲೀಲ ವಿಡಿಯೋ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲಿಲ್ಲ ಎಂದು ಹೇಳಲಾಗಿದೆ.
ಇತ್ತೀಚಿನ ಪ್ರಕರಣಗಳಲ್ಲಿನ ಬೆಳವಣಿಗೆಗಳಿಂದ ದರ್ಶನ್ ಮತ್ತು ಪ್ರಜ್ವಲ್ ಇಬ್ಬರೂ ಖಿನ್ನತೆಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಾಮೀನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್
2024 ರಲ್ಲಿ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ದರ್ಶನ್ ಮತ್ತು ಗ್ಯಾಂಗ್ ಗೆ ಗುರುವಾರ ಸುಪ್ರೀಂ ಕೋರ್ಟ್ ಶಾಕ್ ನೀಡಿತ್ತು. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಗುರುವಾರ ಬೆಂಗಳೂರು ಪೊಲೀಸರಿಂದ ದರ್ಶನ್ ಮತ್ತು ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳು ಬಂಧಿಸಲ್ಪಟ್ಟರು.
Advertisement