
ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ (Sasikanth Senthil) ಕೈವಾಡವಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಜನಾರ್ಧನ ರೆಡ್ಡಿ, ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ. ಈ ಸಂಪೂರ್ಣ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಸಸಿಕಾಂತ್ ಸೆಂಥಿಲ್ ಎಂದು ಗಂಭೀರ ಆರೋಪ ಮಾಡಿದ್ದಾರೆ.
'ದಕ್ಷಿಣ ಕನ್ನಡದ ಇಬ್ಬರು ವ್ಯಕ್ತಿಗಳೊಂದಿಗೆ ಸಸಿಕಾಂತ್ ಸೆಂಥಿಲ್ ಸೇರಿ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕಾರ್ಯಸೂಚಿಗಳನ್ನು ಸಿದ್ಧಪಡಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಈ ಪ್ರಕರಣದಲ್ಲಿ ಆಸಕ್ತಿ ಇರಲಿಲ್ಲವಾದರೂ, ಹೈಕಮಾಂಡ್‌ನ ಒತ್ತಡ ತಂದು ಎಸ್‌ಐಟಿ ತನಿಖೆ ಮಾಡಿಸಲಾಗಿದೆ. ಎಡಪಂಥೀಯ ನಿಲುವುಗಳನ್ನು ಹೊಂದಿರುವ ಸಸಿಕಾಂತ್ ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು, ಇಲ್ಲವೇ ಸಿಬಿಐ ತನಿಖೆ ನಡೆಸುವ ಅಗತ್ಯವಿದೆ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬಿವೈ ವಿಜಯೇಂದ್ರ ಆಗ್ರಹ
ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, 'ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದಲ್ಲಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ದೇವಸ್ಥಾನದ ಘನತೆಗೆ ಧಕ್ಕೆ ತರುವಂತಹ ಕೆಲಸಗಳು ನಡೆದಿವೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಷಡ್ಯಂತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಅಂತೆಯೇ ಸದ್ಯ ಸದನದಲ್ಲಿ ಗೃಹ ಸಚಿವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಣ್ಣ ಪೋಸ್ಟ್‌ಗಳನ್ನು ಹಾಕಿದ್ದಕ್ಕಾಗಿ ಮಂಡ್ಯ ಮತ್ತು ತುಮಕೂರು ಘಟನೆಗಳಲ್ಲಿ ಸರ್ಕಾರವು 3-4 ಗಂಟೆಗಳಲ್ಲಿ ಕ್ರಮ ಕೈಗೊಂಡಿತ್ತು.
ಆದರೆ, ಧರ್ಮಸ್ಥಳದಂತಹ ಹಿಂದೂ ಧಾರ್ಮಿಕ ಸ್ಥಳಗಳಿಗೆ ಧಕ್ಕೆ ಬಂದಾಗ ಸರ್ಕಾರ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕೆಲವರು, ಇದು ಷಡ್ಯಂತ್ರ ಮಾಡಿದವರ ಓಲೈಕೆ ಮಾಡುವ ಸರ್ಕಾರದ ಪ್ರಯತ್ನವೇ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಯಾರು ಈ ಸಸಿಕಾಂತ್ ಸೆಂಥಿಲ್?
ಪ್ರಸ್ತುತ ತಮಿುನಾಡಿದ ತಿರುವಲ್ಲೂರು ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿರುವ ಸಸಿಕಾಂತ್ ಸೆಂಥಿಲ್, 2009ರಿಂದ 2019ರವರೆಗೆ ರಾಜ್ಯ ಸರ್ಕಾರದಲ್ಲಿ ಐಎಎಸ್ ಅಧಿಕಾರಿಯಾಗಿ ವಿವಿಧ ಹುದ್ದೆ ನಿಭಾಯಿಸಿದ್ದರು. ಐಎಎಸ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ 2020ರಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಿ ಸಂಸದರಾಗಿದ್ದರು. 2019ರಲ್ಲಿ ರಾಜೀನಾಮೆ ನೀಡುವ ವೇಳೆ ಅವರು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. 2017ರಿಂದ ಅವರು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದರು.
Advertisement