
ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಜನರ ಭಾವನೆ ಕೆರಳಿಸುವಂತಹ ವರದಿಯ ಪ್ರಸಾರವನ್ನು ಯೂಟ್ಯೂಬರ್ಸ್ ಹಾಗೂ ಸಾಮಾಜಿಕ ಜಾಲತಾಣಗಳು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಕಠಿಣ ಎಚ್ಚರಿಕೆ ನೀಡಿದೆ.
ವಿಧಾನಸಭೆಯಲ್ಲಿ ಬಿಜೆಪಿ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಉತ್ತರಿಸಿದರು.
ಧರ್ಮಸ್ಥಳ ಗ್ರಾಮ ಪ್ರಕರಣದಲ್ಲೂ ಯೂಟ್ಯೂಬ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ಭಾವನೆಗಳನ್ನು ಕೆರಳಿಸುವಂತಹ ವರದಿ ಮಾಡಲಾಗುತ್ತಿದೆ ಎಂದು ದೂರುಗಳು ಬಂದಿವೆ.
ನಾವು ಅದನ್ನು ಗಮನಿಸಿದ್ದೇವೆ. ಹೀಗೆ ಅವಹೇಳನಕಾರಿಯಾಗಿ ಸುದ್ದಿ ಮಾಡುವವರು, ಭಾವನೆಗಳನ್ನು ಕೆರಳಿಸುವವರು ಈ ಕೂಡಲೇ ಅದನ್ನು ನಿಲ್ಲಿಸಬೇಕು. ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಮುಂದುವರೆದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.
ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬ್ ಚಾನೆಲ್‌ಗಳ 2 ಗುಂಪುಗಳು ಕಿತ್ತಾಡಿಕೊಂಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಇದೇ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು. ಯೂಟ್ಯೂಬ್ ಸೇರಿ ಸಾಮಾಜಿಕ ಜಾಲತಾಣಗಳಿಗೆ ಕಡಿವಾಣ ಹಾಕದಿದ್ದರೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂದರು.
Advertisement