2025 ರ ಗೌರಿ ಗಣೇಶ ಹಬ್ಬಕ್ಕೆ BBMP ಮಾರ್ಗಸೂಚಿ: ಪ್ರತಿಷ್ಠಾಪಿಸಲು ಅನುಮತಿಗಾಗಿ 75 ಏಕಗವಾಕ್ಷಿ ಕೇಂದ್ರ

ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾತ್ರ ಪೂಜಿಸಬೇಕು, ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಕೇಸ್‌ ದಾಖಲಿಸಬೇಕು.
File image
ಸಂಗ್ರಹ ಚಿತ್ರ
Updated on

ಬೆಂಗಳೂರು: ಗೌರಿ-ಗಣೇಶ ಉತ್ಸವಕ್ಕೂ ಮುನ್ನ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಗಸೂಚಿಗಳನ್ನು ಹೊರಡಿಸಿದೆ. ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾತ್ರ ಪೂಜಿಸಬೇಕು, ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಕೇಸ್‌ ದಾಖಲಿಸಬೇಕು.

ಪರಿಸರಕ್ಕೆ ಅಪಾಯ ಉಂಟು ಮಾಡುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಮಾನುಸಾರ ವಿಲೇವಾರಿಗೊಳಿಸಲು ಕ್ರಮವಹಿಸಬೇಕೆಂದು ಸೂಚಿಸಲಾಗಿದೆ. ರಾಸಾಯನಿಕ ಬಣ್ಣಗಳು, ಥರ್ಮೋಕೋಲ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮೇಲೆ ತಿಳಿಸಲಾದ ಯಾವುದೇ ವಸ್ತುಗಳಿಂದ ಮಾಡಿದ ವಿಗ್ರಹಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಹೊಣೆಗಾರರಾದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಎಂ ತಿಳಿಸಿದ್ದಾರೆ.

ಆಗಸ್ಟ್ 5 ರಂದು ನಡೆದ ಚರ್ಚೆಯ ನಂತರ ಈ ಆದೇಶ ಹೊರಡಿಸಲಾಗಿದೆ. ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಸ್ಥಳಗಳನ್ನು ಗುರುತಿಸಿ, ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸುವುದು. ಅವಶ್ಯವಿದ್ದಲ್ಲಿ ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಲಾಗಿದೆ.

File image
POP ಗಣೇಶ ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಸ್ಥಾಪಿಸಲು, ಸಂಸ್ಥೆಗಳು ಅಥವಾ ವ್ಯಕ್ತಿಗಳು ಉಪವಿಭಾಗೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ಗೊತ್ತುಪಡಿಸಿದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬೇಕು.

ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಇಲಾಖೆ ಮತ್ತು ಇತರ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅನುಮೋದನೆಗಳನ್ನು ಪಡೆಯುತ್ತಾರೆ. ಗಣೇಶ ಮೂರ್ತಿಗಳ ಸ್ಥಾಪನೆಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು, ಬಿಬಿಎಂಪಿ ಮಿತಿಯೊಳಗಿನ ಉಪವಿಭಾಗೀಯ ಕಚೇರಿಗಳಲ್ಲಿ 75 ಏಕ ಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಮತ್ತು ಅನುಮೋದನೆ ನೀಡಲು ಸಂಬಂಧಿತ ಅಧಿಕಾರಿಗಳು ಈ ಕೇಂದ್ರಗಳಲ್ಲಿ ಹಾಜರಿರುತ್ತಾರೆ.

ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಿ ಹಸಿ ತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಹಾಗೂ ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸುವುದು, ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ತಂಡಗಳನ್ನು ನೇಮಿಸುವುದು.

ಆಂಬ್ಯುಲೆನ್ಸ್ ವ್ಯವಸ್ಥೆ, ವೈದ್ಯರು ಮತ್ತು ಶುಶ್ರೂಷಕಿಯರನ್ನು ಪ್ರಾಥಮಿಕ ಚಿಕಿತ್ಸೆ ನೀಡಲು ನೇಮಿಸಿ, ಎಲ್ಲ ಪಿ.ಎಚ್.ಸಿ ಗಳ ಬಳಿಯಲ್ಲಿ ಹೆಚ್ಚುವರಿ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸಿದ್ಧವಿರುವಂತೆ ಕ್ರಮವಹಿಸುವುದು ಹಾಗೂ ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ನುರಿತ ಈಜುಗಾರರನ್ನು ಒಳಗೊಂಡಂತೆ ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ನಿಯೋಜನೆ ಮಾಡಲು ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com