ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಪೊಲೀಸರು ನೊಟೀಸ್ ಜಾರಿಗೊಳಿಸಿದ್ದರು. ಈ ನೊಟೀಸ್ ಗೆ ಪೊಲೀಸರ ನೋಟಿಸ್‌ಗೆ ಸೂಕ್ತ ಉತ್ತರ ನೀಡದ ಕಾರಣ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಸೂಚನೆ ನೀಡಲಾಗಿತ್ತು. ಆದರೆ, ಆ ನೋಟಿಸ್ಗೆ, ‘15 ದಿನಗೊಳಗೆ ಹಾಜರಾಗುತ್ತೇನೆ’ ಎಂದು ತಿಮರೋಡಿ ಉತ್ತರಿಸಿದ್ದರು. ಪೊಲೀಸರು ಕೊಟ್ಟ ನೋಟಿಸ್ನಲ್ಲೇ ಉತ್ತರಿಸಿ ಸಹಿ ಮಾಡಿದ್ದರು. ಈ ಬೆಳವಣಿಗೆ ನಂತರ ಪೊಲೀಸರು ಅವರ ನಿವಾಸಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಮಹೇಶ್ ಶೆಟ್ಟಿ ತಿಮರೋಡಿ ಬೆನ್ನಲ್ಲೇ ಸುಳ್ಳು ಸುದ್ದಿ ಹರಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿಗೆ ಬಂಧನದ ಭೀತಿ ಎದುರಾಗಿದ್ದು ಆತ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಸಮೀರ್ ವಿರುದ್ಧ ಸುಮೋಟೋ ಕೇಸ್ ದಾಖಲಾಗಿತ್ತು.
ತಲೆ ಮೇಲೆ ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ಇಂದು ನಡೆದಿದೆ. ತನ್ವಿ ಮೃತ ಬಾಲಕಿಯಾಗಿದ್ದು, 5ನೇ ತರಗತಿಯ ಬಾಲಕಿಯನ್ನು ಆಕೆಯ ತಾಯಿ ಶಾಲೆಗೆ ಬಿಡಲು ಹೋದಾಗ ದುರ್ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬಾಲಕಿಯನ್ನು ತಾಯಿ ಕರೆದುಕೊಂಡು ಹೋಗುತ್ತಿದ್ದು, ಯಲಹಂಕದ ಕೋಗಿಲು ಮುಖ್ಯ ರಸ್ತೆ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ವಾಹನ ಸ್ಕಿಡ್ ಆಗಿದೆ. ಈ ವೇಳೆ ವಾಹನದಿಂದ ಕೆಳಗೆ ಬಿದ್ದ ಬಾಲಕಿಯ ತಲೆ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದಿದ್ದು, ಬಾಲಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ. ಘಟನೆ ಬೆನ್ನಲ್ಲೇ ಯಲಹಂಕ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ನ್ನು ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಗಿದೆ. ಇನ್ನು ಸೌಹಾರ್ದ ಸಹಕಾರಿ ಮಂಡಳಿಗಳ ಸದಸ್ಯರು ಪ್ರತಿ ವರ್ಷ ತಮ್ಮ ಕುಟುಂಬದ ಆಸ್ತಿ ವಿವರ ಸಲ್ಲಿಸುವುದನ್ನು ಕಡ್ಡಾಯ ಮಾಡಲು ಸರ್ಕಾರ ತಂದಿದ್ದ ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ’ಗೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಪಡೆಯುವಲ್ಲಿ ಸರ್ಕಾರಕ್ಕೆ ತೀವ್ರ ಹಿನ್ನಡೆಯುಂಟಾಗಿದೆ. ವಿಧಾನಪರಿಷತ್ ನಲ್ಲಿ 23 ಸದಸ್ಯರು ಮಸೂದೆಯನ್ನು ಬೆಂಬಲಿಸಿದರೆ, ಬಿಜೆಪಿ-ಜೆಡಿಎಸ್ ಒಕ್ಕೂಟದ 26 ಎಂಎಲ್‌ಸಿಗಳು ಇದನ್ನು ವಿರೋಧಿಸಿದ್ದರಿಂದ ಅದು ಮೂರು ಮತಗಳಿಂದ ಸೋಲಿಗೆ ಒಳಗಾಯಿತು.
ಕಳೆದ 2 ತಿಂಗಳುಗಳಿಂದ ಸ್ಥಗಿತವಾಗಿದ್ದ ಬೈಕ್ ಟ್ಯಾಕ್ಸಿ ಇಂದಿನಿಂದ ಪುನಾರಂಭಗೊಂಡಿದ್ದು ಉಬರ್ ಮತ್ತು ರ್ಯಾಪಿಡೋ ಸಂಸ್ಥೆಗಳು ಆ್ಯಪ್ ಮೂಲಕ ಸೇವೆ ಪುನಾರಂಭಿಸಿವೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬೈಕ್ ಟ್ಯಾಕ್ಸಿ ಸೇವೆ ಪುನರಾರಂಭಗೊಂಡಿದ್ದು, ಓಲಾ ಹೊರತುಪಡಿಸಿ ಉಬರ್ ಮತ್ತು ರ್ಯಾಪಿಡೋ ಆ್ಯಪ್ಗಳಲ್ಲಿ ಮಾತ್ರ ಸೇವೆ ಲಭ್ಯವಿದೆ. ಸುರಕ್ಷತಾ ಕಾರಣಗಳಿಂದ ಜೂನ್ 16 ರಿಂದ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ನಿಷೇಧದ ಬೆನ್ನಲ್ಲೇ, ಬೈಕ್ ಟ್ಯಾಕ್ಸಿ ಸೇವೆ ರದ್ದು ಪ್ರಶ್ನಿಸಿ ಕಂಪನಿಗಳು ಹೈಕೋರ್ಟ್ ಮೊರೆ ಹೋಗಿದ್ದವು. ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಟ್ಯಾಕ್ಸಿ ಅಗ್ರಿಗೇಟರ್‌ಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಲು ನ್ಯಾಯಾಲಯವು ಅನುಮತಿಸಿಲ್ಲ. ನಾನು ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತನಾಡಿ ಅಭಿಪ್ರಾಯವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್ ಗೇಟ್ ಗಳನ್ನು ಬದಲಾವಣೆ ಮಾಡಲು ತುಂಗಭದ್ರಾ ಮಂಡಳಿಯವರು ಟೆಂಡರ್ ಕರೆದಿದ್ದಾರೆ. ಈಗಾಗಲೇ ಅಹಮದಾಬಾದ್ ಸಂಸ್ಥೆಯವರಿಗೆ ಗುತ್ತಿಗೆ ನೀಡಲಾಗಿದೆ. ಆರು ಗೇಟ್ ಗಳ ತಯಾರಿ ಕೆಲಸ ನಡೆಯುತ್ತಿದೆ. ಗೇಟ್‌ಗಳ ಬದಲಾವಣೆ ಕಾರ್ಯ ಜೂನ್ 2026 ರೊಳಗೆ ಪೂರ್ಣಗೊಳ್ಳುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹ ಮಾಡಬೇಕಾದ ಕಾರಣಕ್ಕೆ ಎರಡನೇ ಬೆಳೆಗೆ ಈ ವರ್ಷ ನೀರು ನೀಡಲು ಸಾಧ್ಯವಾಗುತ್ತಿಲ್ಲ. ನೀರು ಕೊಟ್ಟರೆ ಗೇಟ್ ಅಳವಡಿಕೆ ಸಾಧ್ಯವಿಲ್ಲ. ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
Advertisement