
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು AI ವಿಡಿಯೋ ಮಾಡಿ, ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಜುಲೈ 12ರಂದು ಸಮೀರ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು. ಅಲ್ಲದೆ ಸಮೀರ್‌ನನ್ನು ವಶಕ್ಕೆ ಪಡೆಯಲು ಧರ್ಮಸ್ಥಳ ಪೊಲೀಸರು ಇಂದು ಬನ್ನೇರುಘಟ್ಟದ ನಿವಾಸಕ್ಕೆ ಆಗಮಿಸಿದ್ದರು.
ಈ ಮಧ್ಯೆ, ಆಗಸ್ಟ್ 19 ರಂದು ಜಾಮೀನು ಕೋರಿ ಸಮೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ, ಇಂದು ಆರೋಪಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಸಮೀರ್ ಬಂಧನದಿಂದ ಪಾರಾಗಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಬಗ್ಗೆ ಪ್ರಚೋದನಕಾರಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್ ಎಐ ಬಳಸಿ ತಪ್ಪು ಮಾಹಿತಿ ಹರಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಲ್ಲದೆ ಧರ್ಮಸ್ಥಳ ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಮೀರ್‌ನನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಇನ್ನು ಇತ್ತೀಚೆಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು.
Advertisement