
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಶನಿವಾರದಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಿದೆ,
ಸಮೀಕ್ಷೆ ವೇಳೆ ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ಸಹಕರಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಅಧ್ಯಕ್ಷ ಮಧುಸೂಧನ್ ಆರ್ ನಾಯಕ್ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ, ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸವು, ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ.
2ನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ. ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ ಸೆ.22ರಿಂದ ಅ.7ರ ವರೆಗೆ ನಡೆಸಲು ಗುರಿಯಾಗಿಟ್ಟುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುತ್ ಮೀಟರ್ ಸಂಪರ್ಕದ (ಆರ್.ಆರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ಪ್ರಕ್ರಿಯೆ ಅಭಿನಂದನೀಯವಾಗಿದೆ. ಅದಕ್ಕೆ ಅನುಗುಣವಾಗಿ ಒಂದು ‘ಆ್ಯಪ್’ ಅನ್ನು ಅಭಿವೃದ್ಧಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಸೇರಿದಂತೆ ಆಯೋಗದ, ಇಂಧನ ಇಲಾಖೆಯ, ಇ.ಡಿ.ಸಿ.ಎಸ್ ಸಂಸ್ಥೆಯ ಸೃಜನಶೀಲ ಸಲಹಾ ತಂಡದ ಸಹಕಾರದೊಂದಿಗೆ ಈ ಪ್ರಕ್ರಿಯೆಯನ್ನು ವಿನ್ಯಾಸಗೊಳಿಸಲಾಗಿದೆ. ಇದು ದೇಶದಲ್ಲಿಯೇ ಮೊದಲನೆಯ ಪ್ರಯತ್ನವಾಗಿದೆ. ಈ ಪ್ರಕ್ರಿಯೆ ಆ.23ರಿಂದ ಪ್ರಾರಂಭವಾಗುತ್ತಿದ್ದು, ‘ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ನಮಗೆ ಸಹಾಯ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಎಸ್ಕಾಂಗಳ ಮೀಟರ್ ರೀಡರ್‍ಗಳು, ಗ್ರಾಹಕರ ಮನೆ ಬಳಕೆ ವಿದ್ಯುತ್ ಸಂಪರ್ಕದ ಮೀಟರ್ ಅನ್ನು ಓದುವುದು ಮತ್ತು ಬಿಲ್ಲಿಂಗ್ ಮಾಡುವುದರ ಜೊತೆಗೆ ಮನೆಗಳನ್ನು ‘ಜಿಯೋ ಟ್ಯಾಗ್’ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವ್ಯಾಪ್ತಿಗೆ ಒಳಪಡಿಸುತ್ತಾರೆ. ಮೀಟರ್ ರೀಡರ್‍ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು (ಇಡಿಸಿಎಸ್) ನಾಗರಿಕ ಸೇವೆಗಳ ಇಲೆಕ್ಟ್ರಾನಿಕ್ ವಿತರಣೆನ ಸರ್ವರ್ ಗಳಲ್ಲಿ ಅಪ್ಲೋಡ್ ಮಾಡಲಾಗುತ್ತದೆ.
ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲ್ಯೀಕರಿಸಿದ ನಂತರ ‘ಮನೆ ಪಟ್ಟಿ’ ಮತ್ತು ಸಮೀಕ್ಷೆಯ ಉದ್ದೇಶಕ್ಕಾಗಿ ‘ಮ್ಯಾಪಿಂಗ್’ ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್‍ನಲ್ಲಿ ಮನೆಯ ‘ಸ್ಥಳ’ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ ‘ವಿಶಿಷ್ಟ ಸಂಖ್ಯೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆ.23ರಿಂದ ಸದರಿ ಕೆಲಸವನ್ನು ಪ್ರಾರಂಭಿಸಲಾಗುವುದು. ಅಭಿವೃದ್ಧಿ ಪಡಿಸಲಾದ ಆ್ಯಪ್‍ನಲ್ಲಿ ಮಾಹಿತಿ ದಾಖಲಿಸಲಾಗುತ್ತದೆ. ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡಲಾಗುತ್ತದೆ. ಸಮೀಕ್ಷೆಯು ಹಿಂದುಳಿದ ವರ್ಗಗಳು ಮತ್ತು ಇತರ ಎಲ್ಲಾ ಜನರ ದತ್ತಾಂಶಗಳನ್ನು ಸೆರೆಹಿಡಿಯುವುದು ಮಾತ್ರವಲ್ಲದೇ ಅಂದಾಜು 7 ಕೋಟಿ ಜನರಿಗೆ ಸರಕಾರಿ ಇಲಾಖೆಗಳಿಂದ ಪ್ರಾರಂಭಿಸಲಾಗಿರುವ ಹಾಗೂ ಮುಂದೆ ಪ್ರಾರಂಭಿಸಲಿರುವ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಬಹುದಾದ ಉಪಯುಕ್ತ ದತ್ತಾಂಶವಾಗಲಿದೆ ಎಂದು ಹೇಳಿದ್ದಾರೆ.
Advertisement