
ಬೆಂಗಳೂರು: ನೇಣು ಬಿಗಿದು 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕುಸುಮಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.
ಶಾಲೆಯಲ್ಲಿ ಅತೀವ್ರ ಕೆಲಸ ಕೊಡುತ್ತಿದ್ದು, ಇದರಿಂದಾಗಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಆದರೆ,ಶಾಲೆಯ ಮುಖ್ಯೋಪಾಧ್ಯಾಯ ಅಶೋಕ್ ಅವರು ಆರೋಪವನ್ನು ನಿರಾಕರಿಸಿದ್ದಾರೆ. ನಾವು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ನಡೆಸುತ್ತಿದ್ದೇವೆ. ಹೋಂವರ್ಕ್ ಕುರಿತು ಶಿಕ್ಷಕರಿಂದ ಯಾವುದೇ ಬಲವಂತ ಅಥವಾ ಕಿರುಕುಳವಿಲ್ಲ. ಕುಸುಮಾ ಒಳ್ಳೆಯ ವಿದ್ಯಾರ್ಥಿನಿಯಾಗಿದ್ದು, ಸಮಯಕ್ಕೆ ಸರಿಯಾಗಿ ಹೇಳಿದ್ದ ಕೆಲಸವನ್ನು ಮಾಡುತ್ತಿದ್ದಳು, ಶೈಕ್ಷಣಿಕವಾಗಿ ಉತ್ತಮವಾಗಿದ್ದಳು ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಮದನಾಯಕನಹಳ್ಳಿ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Advertisement