
ಬೆಂಗಳೂರು: ನಗರದ ಹಲಸೂರು ಕೆರೆ ಸಮೀಪವಿರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
4 ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
`De-Brahminize Dravidistan’ ಎಂಬ ಸಂಘಟನೆಯಿಂದ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಗುರುದ್ವಾರದ ಅಧಿಕೃತ ಮೇಲ್ ಐಡಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ.
ಗುರುದ್ವಾರದ ಶೌಚಾಲಯದಲ್ಲಿ ನಾಲ್ಕು ಆರ್ಡಿಎಕ್ಸ್ ಇರಿಸಲಾಗಿದ್ದು, ಅವುಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ವರದಿಗಳು ತಿಳಿಸಿವೆ.
ಇತ್ತೀಚೆಗೆ ನಗರದ ಸಿಟಿ ಸಿವಿಲ್ ಕೋರ್ಟ್‌ಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಬಂದಿದ್ದು, ಈ ವಿಷಯ ತಿಳಿದು ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಾಂಬ್‌ಗಾಗಿ ಹುಡುಕಾಟ ನಡೆಸಿತ್ತು. ಆದರೆ, ಯಾವುದೇ ವಸ್ತುಗಳು ಪತ್ತೆಯಾಗಿರಲಿಲ್ಲ ನಂತರ ಹುಸಿ ಬೆದರಿಕೆ ಎಂದು ತಿಳಿದುಬಂದಿತ್ತು.
ಅದಕ್ಕೂ ಮುನ್ನ ಬೆಂಗಳೂರು ಹಾಗೂ ಕಲಬುರಗಿ ವಿಮಾನ ನಿಲ್ದಾಣಗಳಿಗೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿಗೆ ಹಾಗೂ ಹಲವು ಶಾಲೆಗಳಿಗೂ ಇಂತಹ ಹುಸಿ ಬಾಂಬ್ ಬೆದರಿಕೆಗಳು ಬಂದಿದ್ದವು.
Advertisement