
ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಶನಿವಾರವೂ ಭಾರಿ ಮಳೆಯಾಗಿದ್ದು, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜನಜೀವನದ ಅಸ್ತವ್ಯಸ್ತಗೊಂಡಿದೆ.
ಉತ್ತರ ಕನ್ನಡದ ಹೊನ್ನಾವರ ತಾಲ್ಲೂಕಿನಲ್ಲಿ, ಹಗಲಿನಲ್ಲಿ ನಿರಂತರ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 30 ರಂದು ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತವು ಶನಿವಾರ ಅಂಗನವಾಡಿಗಳು ಮತ್ತು ಪ್ರೌಢಶಾಲೆ ಹಂತದವರೆಗಿನ ಶಾಲೆಗಳಿಗೆ ರಜೆ ಘೋಷಿಸಿದೆ.
ಕರಾವಳಿ ಪ್ರದೇಶದಲ್ಲಿ ಬಲವಾದ ಗಾಳಿ ಮತ್ತು ಒರಟಾದ ಅಲೆಗಳು ಮುಂದುವರಿಯುತ್ತಿರುವುದರಿಂದ, ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ, ಭಾರಿ ಮಳೆಯಿಂದಾಗಿ ಕೆಲವು ಹಳ್ಳಿಗಳು ಪ್ರವಾಹಕ್ಕೆ ಸಿಲುಕಿವೆ.
ಅಧಿಕಾರಿಗಳ ಪ್ರಕಾರ, ಮಲೆನಾಡು ಪ್ರದೇಶದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಂದ ಸಣ್ಣಪುಟ್ಟ ಭೂಕುಸಿತಗಳು ವರದಿಯಾಗಿವೆ. ಈ ಭೂಕುಸಿತಗಳಿಂದಾಗಿ ಕೆಲವು ರಸ್ತೆಗಳು ಮತ್ತು ತೋಟಗಳಿಗೆ ಹಾನಿಯುಂಟಾಗಿದೆ.
ಕೊಡಗು ಜಿಲ್ಲೆಯಲ್ಲೂ ಭಾರಿ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಬಗ್ಗೆ ಕಳವಳ ವ್ಯಕ್ತವಾಗಿದೆ. ಹೆಚ್ಚಿನ ಅಪಾಯವಿರುವ ವಲಯಗಳ ನಿವಾಸಿಗಳು ಜಾಗರೂಕರಾಗಿರುವಂತೆ ಜಿಲ್ಲಾಡಳಿತ ಎಚ್ಚರಿಸಿದೆ.
ಮಳೆ ಪೀಡಿತ ಎಲ್ಲ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಸಾವುನೋವುಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement