
ಚಿಕ್ಕೋಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು. ಬಸ್ಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ.
ಅಧ್ಯಕ್ಷ ಬಂಧನದ ಭೀತಿಯಿಂದ ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ ಎನ್ನಲಾಗಿದೆ. ಕೃತ್ಯ ಎಸಗಿರುವುದು ದೃಢವಾದ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ.
Advertisement