
ಮೈಸೂರು: ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಘೋಷಿಸಿದ್ದಾರೆ.
ಇಂದು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮತ್ತು "ಉಪ್ಪಾರ ಸಮುದಾಯ ಭವನದ" ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪ್ಪಾರ ಸಮುದಾಯದ ಕುಲಶಾಸ್ತ್ರಿಯ ಅಧ್ಯಯನ ವರದಿಯು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಲಾಗುವುದು ಮತ್ತು ನಂತರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ಉಪ್ಪಾರ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿದೆ. ಈ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.
ಇದೇ ವೇಳೆ ಅಪೂರ್ಣಗೊಂಡಿರುವ ಉಪ್ಪಾರ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಬಳಿಕ ಮಾತನಾಡಿದ ಹೊಸದುರ್ಗದ ಭಗೀರಥ ಮಹಾಸಂಸ್ಥಾನ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಸಮುದಾಯವದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇಲ್ಲಿ ಶಾಖಾ ಮಠ ಹಾಗೂ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಐದು ಎಕರೆ ಭೂಮಿ ನೀಡಬೇಕು ಎಂದು ಕೇಳಿಕೊಂಡರು.
ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಯತೀಂದ್ರ ಸಿದ್ದರಾಮಯ್ಯ, ದರ್ಶನ್ ದೃವನಾರಾಯಣ್, ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು ಸೇರಿದಂತೆ ಉಪ್ಪಾರ ಸಮುದಾಯದ ಮುಖಂಡರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement