

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ಅವರಿಗೆ ರಾಜ್ಯದ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
ಹುಟ್ಟು ಹಬ್ಬದ ನಿಮಿತ್ತ ಚಾಮುಂಡಿ ತಾಯಿ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ ಆರ್ ವಿ ದೇವರಾಜ್ ಅವರಿಗೆ ಇಂದು ಸಂಜೆ ಹೃದಯಾಗಾತವಾಗಿದೆ. ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಹೆಚ್ಚಿನ ಚಿಕಿಕತ್ಸೆಗಾಗಿ ಅಲ್ಲಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆರ್‌ವಿ ದೇವರಾಜ್ ಕೊನೆಯುಸಿರೆಳೆದಿದ್ದಾರೆ.
ಸದ್ಯ ಅವರ ಪಾರ್ಥಿವ ಶರೀರ ಜಯದೇವ ಆಸ್ಪತ್ರೆಯಲ್ಲೇ ಇದ್ದು, ನಾಳೆ ಬೆಂಗಳೂರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ.
ಗಣ್ಯರ ಸಂತಾಪ
ಇನ್ನು ಆರ್ ವಿ ದೇವರಾಜ್ ಅವರ ನಿಧನಕ್ಕೆ ರಾಜ್ಯದ ಪ್ರಮುಖ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, 'ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂತೆಯೇ ಮಾಜಿ ಸಂಸದ ಡಿಕೆ ಸುರೇಶ್ ಕೂಡ ಆರ್ ವಿ ದೇವರಾಜ್ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದು, ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, 'ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಆರ್.ವಿ. ದೇವರಾಜ್ ಇಂದು ಹೃದಯಾಘಾತದಿಂದ ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಭಗವಂತನು ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ..' ಎಂದು ಟ್ವೀಟ್ ಮಾಡಿದ್ದಾರೆ.
ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾ ಕೃಷ್ಣ ಕೂಡ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಆರ್ ವಿ ದೇವರಾಜ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. 'ಮಾಜಿ ಸಚಿವರು ಹಾಗೂ ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಆರ್.ವಿ.ದೇವರಾಜ್ ಅವರು ಹೃದಯಾಘಾತದಿಂದ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ' ಎಂದು ಟ್ವೀಟ್ ಮಾಡಿದ್ದಾರೆ.
Advertisement