

ಬೆಂಗಳೂರು: ಕೋವಿಡ್ ಅವಧಿಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಅಂತಿಮ ತನಿಖಾ ವರದಿಯನ್ನು ನ್ಯಾ.ಮೈಕಲ್ ಡಿ. ಕುನ್ಹಾ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದು, ವರದಿ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಸೋಮವಾರ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸಕ್ಕೆ ಆಗಮಿಸಿದ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರು 165 ಪುಟಗಳ ಪರಿಷ್ಕೃತ ವರದಿಯನ್ನು ಸಲ್ಲಿಕೆ ಮಾಡಿದರು. ವರದಿಯಲ್ಲಿ ಆಸ್ಪತ್ರೆಯಲ್ಲಿ ಕರ್ತವ್ಯಲೋಪ ಎಸಗಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗಿದೆ.
ಮೇ 2, 2021 ರ ಮಧ್ಯರಾತ್ರಿ ಹಾಗೂ ಮೇ 3, 2021 ರ ಬೆಳಗಿನ ಜಾವದ ನಡುವೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 36 ಮಂದಿ ಮೃತಪಟ್ಟಿದ್ದರು. ಆಕ್ಸಿಜನ್ ಕೊರತೆ ಕಾರಣದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರೋಗಿಗಳು ಮೃತಪಟ್ಟಿದ್ದರು. ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಘಟನೆಯ ಕುರಿತು ನ್ಯಾಯಾಂಗ ಆಯೋಗದ ತನಿಖೆಗಾಗಿ ನ್ಯಾ. ಬಿ.ಎ. ಪಾಟೀಲ್ ಆಯೋಗ ರಚನೆ ಮಾಡಲಾಗಿತ್ತು.
ಕಾಂಗ್ರೆಸ್ ಸರ್ಕಾರ ಈ ಆಯೋಗದ ವರದಿಯನ್ನು ತಿರಸ್ಕರಿಸಿತ್ತು. ಮರು ತನಿಖೆಯ ಜವಾಬ್ದಾರಿಯನ್ನು ನ್ಯಾ. ಜಾನ್ ಮೈಕೆಲ್ ಡಿ'ಕುನ್ಹಾ ಆಯೋಗಕ್ಕೆ ವಹಿಸಲಾಗಿತ್ತು. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಡಾ. ಕೆ ಸುಧಾಕರ್ ವಿರುದ್ಧ ರಾಜಕೀಯ ದ್ವೇಷ ಸಾಧಿಸಲಾಗಿತ್ತಿದೆ ಎಂಬ ಆರೋಪ ಮಾಡಲಾಗಿತ್ತು. ಆದರೆ ಇದೀಗ ಅಂತಿಮ ವರದಿಯನ್ನು ಏನೆಲ್ಲಾ ವಿಚಾರಗಳನ್ನು ಉಲ್ಲೇಖಿಸಲಾಗಿದೆ ಎಂಬುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
Advertisement