ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಾವಧಿ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಮತ್ತೊಂದು ಶಾಕ್ ನೀಡಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.
ಅಪರಾಧದ ಗಂಭೀರತೆ ಮತ್ತು ಬಾಕಿ ಇರುವ ಇತರ ಪ್ರಕರಣಗಳ ಮೇಲಿನ ಸಂಭಾವ್ಯ ಪರಿಣಾಮದಿಂದಾಗಿ ಈ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಿದ ಪೀಠ, ಪ್ರಸ್ತುತ ಪ್ರಕರಣದಲ್ಲಿ ದೂರುದಾರರು, ಆರೋಪಿಯ "ಉತ್ತಮ ರಾಜಕೀಯ ಮತ್ತು ಆರ್ಥಿಕ ಹಿನ್ನೆಲೆ" ಯಿಂದಾಗಿ ಪೊಲೀಸರನ್ನು ಸಂಪರ್ಕಿಸಲು ವಿಳಂಬ ಮಾಡಿದ್ದಾರೆ ಎಂದು ಹೇಳಿದೆ.
ಪ್ರಜ್ವಲ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇನ್ನೂ ವಿಚಾರಣೆಯಲ್ಲಿರುವ ಸಂಬಂಧಿತ ಪ್ರಕರಣಗಳಲ್ಲಿ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ ಎಂಬ ವಿಶೇಷ ಸಾರ್ವಜನಿಕ ಅಭಿಯೋಜಕರ ವಾದವನ್ನು ಹೈಕೋರ್ಟ್ ಒಪ್ಪಿಕೊಂಡಿದೆ.
ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಒಂದು ಪ್ರಕರಣದಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ.


