ಆರ್.ವಿ.ದೇವರಾಜ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭೆ, ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಮಂಗಳವಾರ ಮೃತರ ಅಂತಿಮ ದರ್ಶನ ಪಡೆದು ಮಾತನಾಡಿದ ಮುಖ್ಯಮಂತ್ರಿಯವರು, 'ಬುಧವಾರ ಅವರ ಜನ್ಮದಿನ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ. ಅಗಲಿಕೆಯಿಂದ ಕಾಂಗ್ರೆಸ್‌ಗೆ ತುಂಬಲಾರದ ನಷ್ಟವುಂಟಾಗಿದೆ ಎಂದು ಹೇಳಿದರು.
ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ಅವರು ಕೆಲವು ವಿಚಾರಗಳ ಚರ್ಚಿಸಿದ್ದರು. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಶಿವಕುಮಾರ್ ಅವರು ದೇವರಾಜ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
'ನನ್ನ ಆತ್ಮೀಯರಾಗಿದ್ದ ದೇವರಾಜ್, ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸೇವಾದಳದ ಅಧ್ಯಕ್ಷರಾಗಿ, 1989ರಲ್ಲಿ ಮೊದಲ ಬಾರಿಗೆ ಶಾಸಕರಾದರು. ಕೆಎಸ್ಸಾರ್ಟಿಸಿ ಅಧ್ಯಕ್ಷರಾಗಿದ್ದರು. ನಂತರ ತಮ್ಮ ಕ್ಷೇತ್ರವನ್ನು ಎಸ್.ಎಂ. ಕೃಷ್ಣ ಅವರಿಗೆ ಬಿಟ್ಟುಕೊಟ್ಟಿದ್ದರು. ನಂತರ ವಿಧಾನಪರಿಷತ್ ಸದಸ್ಯರಾಗಿದ್ದ ನಿಷ್ಠಾವಂತ ಕಾರ್ಯಕರ್ತ ಪಕ್ಷದ ಯಾವುದೇ ಕಾರ್ಯಕ್ರಮವಿದ್ದರೂ ಹೂವನ್ನು ಕಳುಹಿಸುತ್ತಿದ್ದರು. ಮೂರು ದಿನಗಳ ಹಿಂದೆ ನಮ್ಮ ಮನೆಗೆ ಬಂದು ಭೇಟಿ ಮಾಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸುತ್ತೇನೆ ಎಂದರು.
ಇದೇ ವೇಳೆ ಸಚಿವರಾದ ಜಿ. ಪರಮೇಶ್ವರ್, ಜಮೀರ್ ಅಹ್ಮದ್ ಖಾನ್, ನಟ ಧ್ರುವ ಸರ್ಜಾ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.


